ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸುವ ಕುರಿತ ಶಿಫಾರಸು ಒಳಗೊಂಡ ತಾತ್ಕಾಲಿಕ ವರದಿಯನ್ನು ರಾಜ್ಯ ಶಿಕ್ಷಣ ನೀತಿ ಆಯೋಗ ಸಲ್ಲಿಸಿದ್ದು, ಈ ಕುರಿತು ಶಾಲಾ ಶಿಕ್ಷಣ ಇಲಾಖೆ ನಿರ್ಧಾರ ಪ್ರಕಟಿಸಿದೆ. ಅದರ ಪ್ರಕಾರ ಮಕ್ಕಳಿಗೆ 5 ವರ್ಷ 5 ತಿಂಗಳು ಆಗಿದ್ದರೆ, ಎಲ್ಕೆಜಿ, ಯುಕೆಜಿ ಮುಗಿಸಿದ್ದರೆ ಈ ವರ್ಷ ಮಾತ್ರ ಒಂದನೇ ತರಗತಿಗೆ ಪ್ರವೇಶ ನೀಡಲಾಗುತ್ತದೆ. ಇದಕ್ಕೂ ಮುನ್ನ ರಾಜ್ಯ ಪಠ್ಯಕ್ರಮದಲ್ಲಿ 1ನೇ ತರಗತಿಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು 6 ವರ್ಷ ಆಗಿರುವುದು ಕಡ್ಡಾಯವಾಗಿತ್ತು. ಮುಂದಿನ ಶೈಕ್ಷಣಿಕ ವರ್ಷದಿಂದ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.
ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರ್ದೇಶನ ಕೋರಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಿದೆ. ಮುಡಾದಿಂದ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ನಿವೇಶನಗಳನ್ನು ಅಕ್ರಮ ಹಂಚಿಕೆ ಬಗ್ಗೆ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ಈಗಾಗಲೇ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಆದರೆ ಲೋಕಾಯುಕ್ತ ಪಾರದರ್ಶಕ ತನಿಖೆ ನಡೆಸಿಲ್ಲ ಎಂದು ಆರೋಪಿಸಿದ ಸ್ನೇಹಮಯಿ ಕೃಷ್ಣ ಅವರು, ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಬೇಕೆಂಬ ಮನವಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಫೆಬ್ರವರಿ 7 ರಂದು ತಿರಸ್ಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ಕಲಬುರಗಿಯಲ್ಲಿ ಬುಧವಾರ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಂಡಿದ್ದರು. ಈ ವೇಳೆ ಭಾಷಣ ಮಾಡಿದ ಖರ್ಗೆ, ಪ್ರಧಾನಿ ನರೇಂದ್ರ ಮೋದಿಯವರು ಕಲ್ಯಾಣ ಕರ್ನಾಟಕಕ್ಕೆ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ, ಮಾಡುವುದೂ ಇಲ್ಲ. ಏಕೆಂದರೆ ನಾನು 1 ವರ್ಷದಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕಳೆದ 10 ವರ್ಷಗಳಿಂದ ಮಾಡುವುದಕ್ಕೆ ಆಗಿಲ್ಲ. ಕಡೇಚೂರಿನಲ್ಲಿ ರೈಲು ಬೋಗಿ ಕಾರ್ಖಾನೆ ನಿರ್ಮಾಣಕ್ಕಾಗಿ ಉಚಿತವಾಗಿ ಜಾಗ, ನೀರು, ವಿದ್ಯುತ್ ನೀಡಿದರು ಕೂಡ ಮೋದಿ ಸರ್ಕಾರ ಅನುದಾನ ಬಿಡುಗಡೆ ಮಾಡದೆ ನಿರ್ಲಕ್ಷಿಸುತ್ತಿದೆ. ಕಲಬುರಗಿಯಿಂದ ಬೆಂಗಳೂರಿಗೆ ಹೆಚ್ಚುವರಿ ರೈಲುಗಳನ್ನು ಬಿಡಿ ಎಂದು ಮನವಿ ಮಾಡಿದರೂ ಸಹ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ಆದರೆ ಕೇಂದ್ರ ಸರ್ಕಾರಕ್ಕೆ ವಿಪಕ್ಷ ನಾಯಕರ ಮೇಲೆ ಐಟಿ, ಇಡಿ ದಾಳಿಗಳನ್ನು ಮಾಡಿಸುವುದರಲ್ಲಿ ಹೆಚ್ಚಿನ ಆಸಕ್ತಿ ಇದೆ ಎಂದು ಆರೋಪಿಸಿದರು.
ನಮ್ಮ ಮೆಟ್ರೋ ಕಾಮಗಾರಿಗೆ ಕೊಂಡೊಯ್ಯುತ್ತಿದ್ದ ವಯಾಡೆಕ್ಟ್ ಉರುಳಿ ಬಿದ್ದು, ಓರ್ವ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೋಗಿಲು ಕ್ರಾಸ್ ಬಳಿ ನಡೆದಿದೆ. ತಡರಾತ್ರಿ 12:05 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಶಿಡ್ಲಘಟ್ಟ ಮೂಲದ ಆಟೋ ಚಾಲಕ ಖಾಸಿಂ ಸಾಬ್ ಮೃತ ದುರ್ದೈವಿ. ಪ್ಯಾಸೆಂಜರ್ ಪಿಕ್ ಮಾಡಿಕೊಂಡು ನಾಗವಾರದ ಕಡೆಗೆ ಹೋಗುತ್ತಿದ್ದ ವೇಳೆ ದುರಂತ ಸಂಭವಿಸಿದೆ. ವಯಾಡೆಕ್ಟ್ ಬೀಳುತ್ತಿರುವುದನ್ನು ಗಮನಿಸಿದ ಪ್ಯಾಸೆಂಜರ್ ಆಟೋದಿಂದ ಇಳಿದು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಖಾಸಿಂ ಸಾಬ್ ಇಳಿಯುವಷ್ಟರಲ್ಲೇ ವಯಾಡೆಕ್ಟ್ ಆಟೋ ಮೇಲೆ ಉರುಳಿಬಿದ್ದಿತ್ತು. ಇನ್ನು ಘಟನೆಗೆ ವಿಷಾದ ವ್ಯಕ್ತಪಡಿಸಿರುವ BMRCL ಮೃತನ ಕುಟುಂಬಕ್ಕೆ ಪರಿಹಾರ ಹಣ ಕೊಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಇಂದು ಮತ್ತೊಬ್ಬರನ್ನು ಬಂಧಿಸಿದೆ. KBDC ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಆರ್ ಲೀಲಾವತಿ ಅವರನ್ನು ಏಪ್ರಿಲ್ 12ರಂದು ವಶಕ್ಕೆ ಪಡೆಯಲಾಗಿತ್ತು. ಬೆಂಗಳೂರಿನ ಪಿಎಂಎಲ್‌ಎ ಕೋರ್ಟ್ ಮುಂದೆ ಹಾಜರುಪಡಿಸಿ, ಅವರನ್ನು ತಮ್ಮ ಕಸ್ಟಡಿಗೆ ಪಡೆಯಲಾಗಿದೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. 2018-2023ರ ಅವಧಿಯಲ್ಲಿ ನಿಗಮದ ಖಾತೆಯಿಂದ ಅಕ್ರಮವಾಗಿ 97 ಕೋಟಿ ರೂಪಾಯಿ ವರ್ಗಾವಣೆ ಮಾಡಿಕೊಳ್ಳಲಾಗಿದೆ. ಈ ಸಂಬಂಧ ಸಿಐಡಿ ತನಿಖೆ ನಡೆಸುತ್ತಿದ್ದು, ಇ.ಡಿ ಸಹ ತನಿಖೆ ಆರಂಭಿಸಿದೆ. ಈ ಹಿಂದೆ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಬಿಕೆ ನಾಗರಾಜಪ್ಪನನ್ನು ಇಡಿ ಬಂಧಿಸಿತ್ತು.