ರಾಜ್ಯ

News Headlines 24-04-25 | ಸರ್ಕಾರಿ ಗೌರವದೊಂದಿಗೆ ಪಹಲ್ಗಾಮ್ ಮೃತರ ಅಂತ್ಯಕ್ರಿಯೆ; 177 ಮಂದಿ ಪ್ರವಾಸಿಗರು ರಾಜ್ಯಕ್ಕೆ ವಾಪಸ್; ಉಗ್ರ ದಾಳಿ ಖಂಡಿಸಿ ಸಿದ್ದರಾಮಯ್ಯ ಸಂಪುಟ ನಿರ್ಣಯ ಅಂಗೀಕಾರ!

ಉಗ್ರರ ಗುಂಡೇಟಿಗೆ ಬಲಿಯಾಗಿದ್ದ ಮಂಜುನಾಥ್ ರಾವ್-ಭರತ್ ಭೂಷಣ್ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾಗಿದ್ದ ಕರ್ನಾಟಕ ಮೂಲದ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಇಂದು ನೆರವೇರಿತು. ಮೃತ ಮಂಜುನಾಥ್ ರಾವ್ ಪಾರ್ಥಿವ ಶರೀರ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ತಲುಪಿದರೆ, ಭರತ್ ಭೂಷಣ್ ಪಾರ್ಥಿವ ಶರೀರ ಬೆಂಗಳೂರಿನಲ್ಲಿರುವ ಅವರ ಸ್ವಗೃಹ ತಲುಪಿತು. ಬಳಿಕ ಭರತ್ ಭೂಷಣ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಇನ್ನಿತರ ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತ ಮಂಜುನಾಥ್ ಅಂತ್ಯಕ್ರಿಯೆ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ಸರ್ಕಾರಿ ಗೌರವಗಳೊಂದಿಗೆ ನಡೆದರೆ, ಭರತ್ ಭೂಷಣ್ ಅಂತ್ಯಕ್ರಿಯೆ ಹೆಬ್ಬಾಳದ ಚಿತಾಗಾರದಲ್ಲಿ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.

ಕಾಶ್ಮೀರದಲ್ಲಿ ಸಿಲುಕಿದ್ದ ಕರ್ನಾಟಕ ಮೂಲದ 177 ಪ್ರವಾಸಿಗರು ರಾಜ್ಯಕ್ಕೆ ವಾಪಸ್

ಕಾಶ್ಮೀರದಲ್ಲಿ ಸಿಲುಕಿದ್ದ ಕರ್ನಾಟಕ ಮೂಲದ 177 ಪ್ರವಾಸಿಗರನ್ನು ವಿಶೇಷ ವಿಮಾನದ ಮೂಲಕ ಇಂದು ಮಧ್ಯಾಹ್ನ 12.30ರ ಸುಮಾರಿಗೆ ಬೆಂಗಳೂರಿಗೆ ಸುರಕ್ಷಿತವಾಗಿ ಕರೆತರಲಾಯಿತು. ಕಾಶ್ಮೀರದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆಗಾಗಿ ರಾಜ್ಯದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಅಧಿಕಾರಿಗಳೊಂದಿಗೆ ತೆರಳಿದ್ದರು. ಬೆಂಗಳೂರಿಗೆ ಆಗಮಿಸಿದ ನಂತರ ಮಾತನಾಡಿದ ಸಂತೋಷ್ ಲಾಡ್, ಈಗ ಕಾಶ್ಮೀರಕ್ಕೆ ಹೋಗುವುದು ಸ್ಮಶಾನಕ್ಕೆ ಹೋದಂತೆ. ಕಾಶ್ಮೀರದ ಪರಿಸ್ಥಿತಿ ತುಂಬಾ ಭಯಾನಕವಾಗಿದೆ. ಮಿಲಿಟರಿ ಮತ್ತು ಪ್ಯಾರಾ ಮಿಲಿಟರಿ ಪಡೆಗಳು ಹೆಚ್ಚಾಗಿವೆ. ಪ್ರವಾಸಿಗರಲ್ಲಿರುವ ಭಯವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 3,647 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ

ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 78 ವಿಷಯಗಳ ಕುರಿತು ಚರ್ಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ತೆಗೆದುಕೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಣ್ಣ ನೀರಾವರಿ ಮತ್ತು ಜಲಸಂಪನ್ಮೂಲ ಇಲಾಖೆಗಳ ವತಿಯಿಂದ 1787 ಕೋಟಿ ರೂಪಾಯಿ ವೆಚ್ಚದಲ್ಲಿ 29 ಕಾಮಗಾರಿಗಳನ್ನು ಕೈಗೆತ್ತಿಗೊಳ್ಳಲಾಗಿದೆ. ಪರಿಶಿಷ್ಠ ಪಂಗಡದ ಜನ ವಾಸಿಸುವ ಪ್ರದೇಶಗಳ ಅಭಿವೃದ್ಧಿಗಾಗಿ 203 ಕೋಟಿ. ಮಾನವ-ಆನೆ ಸಂಘರ್ಷ ತಡೆಗಟ್ಟಲು 210 ಕೋಟಿ. ಮೈಸೂರಿನಲ್ಲಿ ಇಲವಾಲದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣ ಹಾಗೂ ಮೈಸೂರು ಕಂದಾಯ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗಾಗಿ 300 ಕೋಟಿ ವಿನಿಯೋಗ ಸೇರಿದಂತೆ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ರೈತರ ಭೂಮಿ ಸ್ವಾಧೀನಕ್ಕೆ ದೇವೆಗೌಡ ಆಕ್ರೋಶ

ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಟೌನ್ ಶಿಪ್ ನಿರ್ಮಾಣಕ್ಕೆ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವ ಕ್ರಮ ಕುರಿತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೇವೇಗೌಡರು ಪತ್ರ ಬರೆದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಬಿಡದಿ ಹೋಬಳಿಯ ಬೈರಮಂಗಲ, ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 24 ಗ್ರಾಮಗಳಲ್ಲಿನ ಹಲವಾರು ಸರ್ವೆ ನಂಬರುಗಳಲ್ಲಿರುವ ಸುಮಾರು 10 ಸಾವಿರ ಎಕರೆ ಜಮೀನನ್ನು ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸುತ್ತಿರುವ ಟೌನ್‌ಶಿಪ್ ಯೋಜನೆಗೆ ಸ್ವಾಧೀನಪಡಿಸಿಕೊಳ್ಳುತ್ತಿರುವ ರೈತರ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಬಡ ರೈತರ ಹಿತದೃಷ್ಠಿಯಿಂದ ಕೈಬಿಡಬೇಕೆಂದು ಮಾಜಿ ಪ್ರಧಾನಿಗಳು ಪತ್ರದಲ್ಲಿ ತಿಳಿಸಿದ್ದಾರೆ.

ಉಗ್ರ ದಾಳಿ ಖಂಡಿಸಿ ನಿರ್ಣಯ ಅಂಗೀಕರಿಸಿದ ಸಿದ್ದು ಸಂಪುಟ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ನಿರ್ಣಯ ಅಂಗೀಕರಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ, ಕೇಂದ್ರ ಗೃಹ ಸಚಿವಾಲಯ ಮತ್ತು ಗುಪ್ತಚರ ಇಲಾಖೆ ಉಗ್ರರ ದಾಳಿ ತಡೆಯುವಲ್ಲಿ "ವಿಫಲವಾಗಿವೆ" ಎಂದು ಆರೋಪಿಸಿದೆ ಮತ್ತು ಗುಪ್ತಚರ ಇಲಾಖೆಯ ವೈಫಲ್ಯದ ಬಗ್ಗೆ ತನಿಖೆ ನಡೆಸುವಂತೆಯೂ ಆಗ್ರಹಿಸಿದೆ. ಅಲ್ಲದೆ, ಭಾರತದಲ್ಲಿ ನೆಲೆಸಿರುವ ವಿದೇಶಿಗರ ಬಗ್ಗೆ ನಿಗಾ ವಹಿಸಲು ಕೇಂದ್ರ ಗೃಹ ಇಲಾಖೆ ರಾಜ್ಯಗಳಿಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಏಪ್ರಿಲ್ 22ರಂದು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ವಿದೇಶಿಗಳು ಸೇರಿ 26 ಜನರು ಸಾವಿಗೀಡಾಗಿದ್ದು ಹಲವರು ಗಾಯಗೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT