ಸಭೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಸತತ 3ನೇ ದಿನವೂ ಕಾಂಗ್ರೆಸ್ ಶಾಸಕರು-ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಂಯಮದಿಂದ ವರ್ತಿಸುವಂತೆ ಸೂಚನೆ

ಸಿದ್ದರಾಮಯ್ಯ ಅವರು ನಯನ ಮೋಟಮ್ಮ ಅವರಿಂದ ವಿವರಣೆ ಕೋರಿದ್ದು, ಪಕ್ಷಕ್ಕೆ ಮುಜುಗರ ಉಂಟುಮಾಡುವ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಅವರು ಸಲಹೆ ನೀಡಿದರು ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು: ಸ್ವಪಕ್ಷೀಯ ಶಾಸಕರ ಅಸಮಾಧಾನ ತಣಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸುತ್ತಿರುವ ಸರಣಿ ಸಭೆ ಸತತ ಮೂರನೇ ದಿನವೂ ಮುಂದುವರೆಯಿತು.

ವಿಧಾನಸೌಧದಲ್ಲಿ ಗುರುವಾರ ನಡೆದ ಸಭೆಯಲ್ಲಿ ಒಟ್ಟು ಒಂಬತ್ತು ಜಿಲ್ಲೆಗಳ ಉಸ್ತುವಾರಿ ಸಚಿವರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದರು.

ಬೆಳಗ್ಗೆ 11.30ರಿಂದ ರಾತ್ರಿ 7 ಗಂಟೆವರೆಗೂ ನಡೆದ ಸರಣಿ ಸಭೆಗಳಲ್ಲಿ ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು.

ಈ ಹಿಂದೆ 100ಕ್ಕೂ ಹೆಚ್ಚು ಶಾಸಕರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಭೆ ನಡೆಸಿದ್ದರು. ಈ ಸಭೆಯು ಶಾಸಕರ ಸಮಸ್ಯೆಗಳನ್ನು ಪರಿಹರಿಸಲು ಸಿದ್ದರಾಮಯ್ಯ ಅವರಿಗೆ ಮಾಡಿದೆ ಎಂದು ತಿಳಿದುಬಂದಿದೆ.

ಗುರುವಾರ ಹಲವು ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಿದ್ದರಾಮಯ್ಯ ಅವರು ಸಭೆ ನಡೆಸಿದ್ದು, ಆಗಸ್ಟ್ 6 ರಂದು ಬೆಂಗಳೂರು, ದಕ್ಷಿಣ ಕನ್ನಡ ಮತ್ತು ಇತರ ಜಿಲ್ಲೆಗಳ ಶಾಸಕರನ್ನು ಭೇಟಿ ಮಾಡಿ, ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಸಭೆಯಲ್ಲಿ, ಸಿದ್ದರಾಮಯ್ಯ ಅವರು ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಅವರಿಂದ ವಿವರಣೆಯನ್ನು ಕೇಳಿದರು.

ಗಣೇಶ ಹಬ್ಬದ ಸಿದ್ಧತೆ ಸಭೆಯಲ್ಲಿ ಹಿಂದೂ ಕಾರ್ಯಕರ್ತ ಪ್ರಮೋದ್ ಮುತಾಲಿಕ್ ಅವರೊಂದಿಗೆ ಕೇಸರಿ ಶಾಲು ಧರಿಸಿ ವೇದಿಕೆ ಹಂಚಿಕೊಂಡಿದ್ದಾರೆ ಎಂದು ವರದಿಯಾಗಿತ್ತು.

ಈ ಕುರಿತು ಸಿದ್ದರಾಮಯ್ಯ ಅವರು ನಯನ ಮೋಟಮ್ಮ ಅವರಿಂದ ವಿವರಣೆ ಕೋರಿದ್ದು, ಪಕ್ಷಕ್ಕೆ ಮುಜುಗರ ಉಂಟುಮಾಡುವ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಅವರು ಸಲಹೆ ನೀಡಿದರು ಎಂದು ಮೂಲಗಳು ತಿಳಿಸಿವೆ.

ಸಭೆಗೆ ಹಾಜರಾಗಲು ಇದ್ದ ಕಾರಣ ಹಾಗೂ ಸಂದರ್ಭಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಣೆ ನೀಡಿದ್ದೇನೆ. ಕಾಂಗ್ರೆಸ್‌ನ ಸಿದ್ಧಾಂತದ ಪ್ರಕಾರ ವರ್ತಿಸುವಂತೆ ಮತ್ತು ಅಂತಹ ತಪ್ಪುಗಳನ್ನು ಪುನರಾವರ್ತಿಸದಂತೆ ಮುಖ್ಯಮಂತ್ರಿ ನನಗೆ ಸಲಹೆ ನೀಡಿದ್ದಾರೆಂದು ನಯನ ಮೋಟಮ್ಮ ಅವರು ತಿಳಿಸಿದ್ದಾರೆ.

ಇದೇ ವೇಳೆ ಕೆಲವು ಸಚಿವರ ವಿರುದ್ಧ ಸುರ್ಜೇವಾಲಾ ಅವರಿಗೆ ದೂರು ನೀಡಿದ್ದ ಅತೃಪ್ತ ಶಾಸಕರು ಸಂಯಮದಿಂದ ವರ್ತಿಸುವಂತೆ ಮತ್ತು ಸಾರ್ವಜನಿಕವಾಗಿ ಮಾತನಾಡದಂತೆಯೂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ ಅವರಿಗೆ ಕಟುವಾದ ಹೇಳಿಕೆಗಳನ್ನು ನೀಡಬೇಡಿ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರೊಂದಿಗೆ ಒಗ್ಗೂಡಿ ಕೆಲಸ ಮಾಡಿ ಎಂದು ಸಲಹೆ ನೀಡಿದರು ಎಂದು ಮೂಲಗಳು ತಿಳಿಸಿವೆ.

ಈ ನಡುವೆ ಸಭೆಯಲ್ಲಿ ಮಳೆಗಾಲದ ಹಿನ್ನೆಲೆಯಲ್ಲಿ ಕ್ಷೇತ್ರಗಳಲ್ಲಿ ಹಾಳಾಗಿರುವ ರಸ್ತೆಗಳ ದುರಸ್ತಿ, ಮಳೆಯಿಂದ ಮನೆ, ಬೆಳೆ ಹಾನಿ ಹಾಗೂ ವಿವಿಧ ಬೆಳೆಗಳಿಗೆ ರೋಗ ಬಾಧೆಗೆ ಸರ್ಕಾರ ಸಂಬಂಧಪಟ್ಟ ಸಂತ್ರಸ್ತರು ಮತ್ತು ಫಲಾನುಭವಿಗಳಿಗೆ ಸೂಕ್ತ ಪರಿಹಾರ ಒದಗಿಸುವಂತೆ ಶಾಸಕರು ಮನವಿ ಮಾಡಿದರು.

ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿಸೇರಿ ವಿವಿಧ ಜಿಲ್ಲೆಗಳಲ್ಲಿ ಉಂಟಾಗಿರುವ ರಸಗೊಬ್ಬರ ಕೊರತೆ ಬಗ್ಗೆಯೂ ಶಾಸಕರು ಸಿಎಂ ಗಮನಕ್ಕೆ ತಂದಿದ್ದಾಗಿ ತಿಳಿದು ಬಂದಿದೆ.

ಶಾಸಕರ ಸಮಸ್ಯೆಗಳನ್ನು ಆಲಿಸಿದ ಸಿಎಂ, ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ 50 ಕೋಟಿ ರು. ಅನುದಾನ ಒದಗಿಸಲಾಗಿದೆ. ಅನುದಾನವನ್ನು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಿ. ಮಳೆಯಿಂದ ತಮ್ಮ ಕ್ಷೇತ್ರಗಳಲ್ಲಿ ಆದ ಜನ, ಜಾನುವಾರುಗಳ ಪ್ರಾಣ ಹಾನಿಗೆ ಸೂಕ್ತ ಪರಿಹಾರ ಒದಗಿಸಲು ಕ್ರಮ ವಹಿಸಿ, ಮನೆಗಳಿಗೆ ಹಾನಿಯಾಗಿದ್ದರೆ, ಬೆಳೆ ಹಾನಿಯಾಗಿದ್ದರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ದೊರಕುವಂತೆ ಮಾಡುವುದು ಶಾಸಕರ ಕರ್ತವ್ಯ ಎಂದು ಸೂಚಿಸಿದರು ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯ ಅವರು ಶಾಸಕರ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳಿಗೆ ಸಣ್ಣ ನೀರಾವರಿ ಇಲಾಖೆಯಿಂದ ಅನುದಾನ ನೀಡುವುದಾಗಿ ಭರವಸೆ ನೀಡಿದ್ದು, ಡಿಕೆ ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಪ್ರಚಾರ ಮಾಡದಂತೆಯೂ ಸಲಹೆ ನೀಡಿದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕ್ಸಿ ಜಿನ್‌ಪಿಂಗ್ ಜತೆ ಮಾತುಕತೆ: ಗಡಿಯಾಚೆಗಿನ ಭಯೋತ್ಪಾದನೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುವ 'ಎಜುಕೇಟ್ ಗರ್ಲ್ಸ್' NGOಗೆ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ; ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು: ಪಿಜಿಯಲ್ಲಿ ಮಲಗಿದ್ದ ಯುವತಿಗೆ ಲೈಂಗಿಕ ಕಿರುಕುಳ, ನಗದು ದೋಚಿ ಪರಾರಿ!

SCROLL FOR NEXT