ಬೆಂಗಳೂರು: ರಸ್ತೆ ಬದಿಯ ಪಾರ್ಕಿಂಗ್‌ನಿಂದ ನಗರದಲ್ಲಿ ಉಂಟಾಗುವ ಸಂಚಾರ ದಟ್ಟಣೆಯ ಸಮಸ್ಯೆಗೆ ಅಂತ್ಯ ಹಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಟೋಯಿಂಗ್ ವ್ಯವಸ್ಥೆಯನ್ನು ಮತ್ತೆ ಆರಂಭಿಸಲು ಚಿಂತನೆ ನಡೆಸುತ್ತಿದೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು, ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಗೆ ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸುವುದು ಒಂದು ಪ್ರಮುಖ ಕಾರಣವಾಗಿದೆ. ಹೀಗಾಗಿ ಟೋಯಿಂಗ್ ವ್ಯವಸ್ಥೆಯನ್ನು ಮತ್ತೆ ಆರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಈ ಬಾರಿ ವಾಹನ ಟೋಯಿಂಗ್ ಅನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುವುದಿಲ್ಲ. ಇಲಾಖೆಯಿಂದಲೇ ಕಾರ್ಯಾಚರಣೆ ನಡೆಸಲಾಗುವುದು. ಅನಿವಾರ್ಯ ಕಾರಣಗಳಿಂದ ರಸ್ತೆಯಲ್ಲಿ ಎದ್ವಾತದ್ವಾವಾಗಿ ನಿಲ್ಲಿಸಲಾಗಿರುವ ವಾಹನಗಳನ್ನು ಟೋಯಿಂಗ್ ಮಾಡಲಾಗುವುದು ಎಂದು ತಿಳಿಸಿದರು.
ಈಗಾಗಲೇ ಪೊಲೀಸರಿಗೆ ಸೂಚನೆ ಕೊಟ್ಟಿದ್ದೇವೆ, ವಾಹನ ಮಾಲೀಕರು ಮತ್ತು ಚಾಲಕರ ಜೊತೆ ಮಾನವೀಯತೆಯಿಂದ ವರ್ತಿಸಬೇಕು, ಅವರೊಂದಿಗೆ ವಾಗ್ವಾದ ಮಾಡಬಾರದು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದರು.