ಬೆಂಗಳೂರು: ಕೊಪ್ಪಳದಲ್ಲಿ ವಾಲ್ಮೀಕಿ ಸಮಾಜದ ಯುವಕ ಗವಿ ಸಿದ್ದಪ್ಪ ಹತ್ಯೆ ಮಾಡಿದ ಪ್ರಕರಣವನ್ನು ಎನ್‌ಐಎಗೆ ಒಪ್ಪಿಸುವಂತೆ ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.
ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಮುಸ್ಲಿಂ ಯುವತಿಯನ್ನು ಪ್ರೀತಿಸಿದ ಎಂಬ ಕಾರಣಕ್ಕೆ ಗವಿ ಸಿದ್ಧಪ್ಪ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಹೇಳಿದರು. ಸರ್ಕಾರ ತಕ್ಷಣವೇ ಉತ್ತರ ನೀಡಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಒಕ್ಕೊರಲಿನಿಂದ ಆಗ್ರಹಿಸಿದರು. ಈ ವಿಷಯದ ಬಗ್ಗೆ ಬಿಜೆಪಿ ಸದಸ್ಯರು ಸ್ವಲ್ಪ ಹೊತ್ತು ಗದ್ದಲ ಎಬ್ಬಿಸಿದರು.
ಬಿಜೆಪಿ ಸದಸ್ಯರು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಪತ್ರವನ್ನು ಹಸ್ತಾಂತರಿಸಿ ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಒತ್ತಾಯಿಸಿದರು.
ಆರೋಪಿಗಳು ಕೊಲೆ ಮಾಡುವುದಕ್ಕೂ ಮೊದಲೇ ಇನ್‌ಸ್ಟಾಗ್ರಾಂನಲ್ಲಿ ಕೊಲೆಯ ಬೆದರಿಕೆ ಹಾಕಿದ್ದರು. ಆದರೆ, ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಗವಿಸಿದ್ಧಪ್ಪ ಅವರದು ಬಡ ಕುಟುಂಬ. ಕೂಲಿ ಕೆಲಸ ಮಾಡುತ್ತಿದ್ದಾರೆ. ಆ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು. ಇವರ ಕುಟುಂಬದ ಒಬ್ಬ ವ್ಯಕ್ತಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.