ಬಳ್ಳಾರಿ: ಇಲ್ಲಿ ಸಮೀಪದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದು, 12 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಮೃತರನ್ನು ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಚೌಡಸಂದ್ರ ಗ್ರಾಮದ ನಿವಾಸಿ ಬಾಲಾನಾಯಕ್ (46) ಮತ್ತು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಶ್ವೇತಾ (42) ಎಂದು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಶನಿವಾರ ರಾತ್ರಿ ಮಸ್ಕಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈರಾಪುರ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ಬಳ್ಳಾರಿ ಟ್ರಾಮಾ ಕೇರ್ ಸೆಂಟರ್ ಮತ್ತು ಸಿರುಗುಪ್ಪ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಿರುಗುಪ್ಪ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.