ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಬೆಳಗಾವಿ ಮತ್ತು ಹಾವೇರಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಬಳ್ಳಾರಿ ಜೊತೆಗೆ ಬೆಂಗಳೂರು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬಲವಾದ ಗಾಳಿಯೊಂದಿಗೆ ಮಧ್ಯಮ ಹಾಗೂ ನಿರಂತರ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಆಗಸ್ಟ್ 23 ರವರೆಗೆ ಮುಂದುವ 6 ದಿನಗಳ ಕಾಲ ನಿರಂತರ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಆಂಧ್ರಪ್ರದೇಶ-ಒಡಿಶಾ ಕರಾವಳಿಯ ಬಳಿ ಬಂಗಾಳಕೊಲ್ಲಿಯಲ್ಲಿ ಅಭಿವೃದ್ಧಿಗೊಂಡಿರುವ ಕಡಿಮೆ ಒತ್ತಡದ ವ್ಯವಸ್ಥೆಯಿಂದ ಭಾರೀ ಮಳೆಯಾಗುತ್ತಿದೆ. ಆಗಸ್ಟ್ 19 ರ ವೇಳೆಗೆ ಈ ವ್ಯವಸ್ಥೆಯು ತೀವ್ರಗೊಳ್ಳಲಿದ್ದು, ರಾಜ್ಯದಲ್ಲಿ ಮತ್ತಷ್ಟು ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ, ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗಲಿದೆ, ಗಂಟೆಗೆ 40–50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮುಂದಿನ 24 ಗಂಟೆಗಳಲ್ಲಿ ಗರಿಷ್ಠ ತಾಪಮಾನ ಸುಮಾರು 25 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಸುಮಾರು 20 ಡಿಗ್ರಿ ಸೆಲ್ಸಿಯಸ್ ಇರುತ್ತದೆ ಮುನ್ಸೂಚನೆ ನೀಡಲಾಗಿದೆ.
ಮುಂದಿನ 48 ಗಂಟೆಗಳ ಕಾಲ 40–50 ಕಿ.ಮೀ ವೇಗದಲ್ಲಿ ನಿರಂತರ ಗಾಳಿಯೊಂದಿಗೆ ಇದೇ ರೀತಿಯ ಪರಿಸ್ಥಿತಿಗಳು ಕಂಡುಬರುತ್ತವೆ ಎಂದು ತಿಳಿಸಿದೆ.
ಮುಂದಿನ ಕೆಲವು ದಿನಗಳಲ್ಲಿ ಬೆಂಗಳೂರು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳ ತಗ್ಗು ಪ್ರದೇಶಗಳಲ್ಲಿ ನಿವಾಸಿಗಳು, ವಿಶೇಷವಾಗಿ ಮುಂದಿನ ಕೆಲವು ದಿನಗಳಲ್ಲಿ ಜಾಗರೂಕರಾಗಿರಲು ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಪ್ರವಾಹ, ಮರಗಳು ಬೀಳುವುದು ಮತ್ತು ಇತರ ಮಳೆ ಸಂಬಂಧಿತ ಹಾನಿಯನ್ನು ಎದುರಿಸಲು ತುರ್ತು ತಂಡಗಳನ್ನು ಸಜ್ಜಾಗಿರಿಸುವಂತೆ ನಾಗರಿಕ ಸಂಸ್ಥೆಗಳಿಗೆ ಸೂಚನೆ ನೀಡಿದೆ.
ಮಳೆ ಕ್ರಮೇಣ ಕಡಿಮೆಯಾಗುವ ಮೊದಲು ಆಗಸ್ಟ್ 20 ರವರೆಗೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 23 ರವರೆಗೆ ವ್ಯಾಪಕ ಮಳೆಯಾಗಲಿದೆ. ಆಗಸ್ಟ್ 24 ಮತ್ತು 26 ರ ನಡುವೆ ರಾಜ್ಯಾದ್ಯಂತ ಒಟ್ಟಾರೆ ಮಳೆಯ ಚಟುವಟಿಕೆಯಲ್ಲಿ ಇಳಿಕೆಯಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಮುಂಗಾರು ಮಳೆ ರಾಜ್ಯದಾದ್ಯಂತ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ 6 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ರಾಜ್ಯದ ಕರಾವಳಿ ಪ್ರದೇಶಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯಾದ್ಯಂತ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಒಂದರಿಂದ ಹತ್ತನೇ ತರಗತಿವರೆಗಿನ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐಗಳಿಗೆ ಸೋಮವಾರ ಆ.18ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.