ಬೆಂಗಳೂರು: ರಾಜ್ಯದ ದಲಿತ ಸಮುದಾಯದ ಬಹುಕಾಲದ ಬೇಡಿಕೆಯಾದ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ಸಹಿಸುದ್ದಿ ನೀಡಿದ್ದು, ಎಡಗೈ ಹಾಗೂ ಬಲಗೈ ಸಮುದಾಯಕ್ಕೆ ತಲಾ ಶೇ. 6 ರಷ್ಟು ಮೀಸಲಾತಿ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ. ಇದರೊಂದಿಗೆ ದಲಿತರ ದಶಕಗಳ ಬೇಡಿಕೆ ಈಡೇರಿದೆ.
ಇಂದು ವಿಧಾಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಿನ್ನೆ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿ ಬಗ್ಗೆ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಎಡಗೈ ಸಮುದಾಯಕ್ಕೆ ಶೇ. 6 ರಷ್ಟು, ಬಲ ಸಮುದಾಯಕ್ಕೆ ಶೇ. 6 ರಷ್ಟು ಹಾಗೂ ಸ್ಪೃಶ್ಯ ಸಮುದಾಯಕ್ಕೆ ಶೇ.5ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನ ಮಾಡಲಾಗಿದೆ ಎಂದರು.
ನ್ಯಾ.ನಾಗಮೋಹನ್ ದಾಸ್ ವರದಿಯ ಶಿಫಾರಸುಗಳನ್ನು ಕೆಲ ಮಾರ್ಪಾಡುಗಳೊಂದಿಗೆ ಒಳ ಮೀಸಲಾತಿ ಕಲ್ಪಿಸಲಾಗಿದೆ. A, B, C ಎಂದು ವರ್ಗೀಕರಣ ಮಾಡಿ ಮೀಸಲಾತಿ ಹಂಚಲಾಗಿದ್ದು, ಈ ಮೂಲಕ ದಶಗಳ ಹೋರಾಟಕ್ಕೆ ನಮ್ಮ ಸರ್ಕಾರ ನ್ಯಾಯ ಒದಗಿಸಿದೆ ಎಂದು ಸಿಎಂ ತಿಳಿಸಿದರು.
"ಒಳ ಮೀಸಲಾತಿ ವಿಚಾರವಾಗಿ ಸರ್ಕಾರ ತೀರ್ಮಾನ ಮಾಡಿದೆ. ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕುರಿತಂತೆ ಸುಪ್ರೀಂ ಕೋರ್ಟ್ ಆದೇಶ ಇದೆ. ಪರಿಶಿಷ್ಟ ಜಾತಿಗಳ ಉಪ ವರ್ಗೀಕರಣ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ ಎಂದಿದೆ. ಸಂವಿಧಾನದ ಸಮಾನತೆ ತತ್ವಕ್ಕೆ ಚ್ಯುತಿ ಬಾರದಂತೆ ಒಳಮೀಸಲಾತಿ ಕಲ್ಪಿಸಲು ಅವಕಾಶ ಇದೆ ಎಂದಿದೆ" ಎಂದು ಸಿದ್ದರಾಮಯ್ಯ ವಿವರಿಸಿದರು.
ಇದೇ ವೇಳೆ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಸದನಕ್ಕೆ ತಿಳಿಸಿದರು.
ಒಳಮೀಸಲಾತಿ ಜಾರಿಗೊಳಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸುತ್ತೇವೆ ಹಾಗೂ ಒಂದು ಬಾರಿಗೆ ವಯೋಮಿತಿ ಸಡಿಲಿಸಲು ತೀರ್ಮಾನ ಮಾಡಲಾಗಿದೆ. ಸರ್ಕಾರ ಕೈಗೊಂಡ ತೀರ್ಮಾನದಲ್ಲಿ ಯಾವುದಾದರೂ ಮಾರ್ಪಾಡು ಅಗತ್ಯವಿದ್ದರೆ ರಾಷ್ಟ್ರೀಯ ಜನಗಣತಿ ಸಂದರ್ಭದಲ್ಲಿ ಅಂಕಿ - ಅಂಶಗಳನ್ನು ಆಧರಿಸಿ ಮಾರ್ಪಾಡು ಮಾಡಲು ಷರತ್ತಿಗೆ ಬದ್ಧವಾಗಿದ್ದೇವೆ ಎಂದರು.
ನ್ಯಾ.ನಾಗಮೋಹನ್ ದಾಸ್ ವರದಿಯಲ್ಲಿ 5 ವಿಂಗಡಣೆ ಮಾಡಲಾಗಿತ್ತು. ಆದ್ರೆ, ಸರ್ಕಾರ, 3 ಗುಂಪುಗಳಾಗಿ ವರ್ಗೀಕರಣ ಮಾಡಿದೆ. 18 ಜಾತಿಗಳಿರುವ ಎಡಗೈ ಸಮುದಾಯಕ್ಕೆ(SC Left ) ಶೇ. 6 ರಷ್ಟು ಮೀಸಲಾತಿ ಹಾಗೂ 20 ಜಾತಿಗಳಿರುವ ಬಲಗೈ ಸಮುದಾಯಕ್ಕೆ (SC Right) ಶೇ. 6 ರಷ್ಟು ಮೀಸಲಾತಿ. ಇನ್ನು 63 ಜಾತಿಗಳಿರುವ ಇತರ ಸಮುದಾಯಕ್ಕೆ ಶೇ. 5 ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.