ಉಡುಪಿ: ಧರ್ಮಸ್ಥಳ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಬಿ ಎಲ್ ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಮತ್ತು ಅಶ್ಲೀಲ ಭಾಷೆ ಬಳಸಿದ ಆರೋಪದ ಮೇಲೆ ಬ್ರಹ್ಮಾವರ ಪೊಲೀಸರು ಗುರುವಾರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಿದ್ದಾರೆ.
ಇಂದು ಬೆಳಗ್ಗೆ ಮಹೇಶ್ ಶೆಟ್ಟಿಯನ್ನು ಉಜಿರೆಯ ಅವರ ನಿವಾಸದಲ್ಲಿ ವಶಕ್ಕೆ ಪಡೆದಿದ್ದ ಪೊಲೀಸರು ಉಡುಪಿಯ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆತಂದಿದ್ದರು. ಬಳಿಕ ಮಧ್ಯಾಹ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಬ್ರಹ್ಮಾವರ ತಾಲೂಕು ಕೋರ್ಟ್‌ಗೆ ಹಾಜರು ಪಡಿಸಿದರು.
ಆರೋಪಿಯ ವಿಚಾರಣೆ ನಡೆಸಿದ ಕೋರ್ಟ್, ಜಾಮೀನು ನೀಡಲು ನಿರಾಕರಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮಹೇಶ್ ಶೆಟ್ಟಿಯ ಜಾಮೀನು ಅರ್ಜಿಯ ವಿಚಾರಣೆ ಅಗಸ್ಟ್ 23ಕ್ಕೆ ನಡೆಯಲಿದೆ.
ಇದು ಜಾಮೀನು ರಹಿತ ಅಪರಾಧವಾಗಿದೆ ಮತ್ತು ವಿಚಾರಣೆಗೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಬರುವಂತೆ ಸೂಚಿಸಿದ್ದ ಎರಡು ಪೊಲೀಸ್ ನೋಟಿಸ್‌ಗಳನ್ನು ತಿಮರೋಡಿ ನಿರ್ಲಕ್ಷಿಸಿದ್ದಾರೆ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ಅವರು ಹೇಳಿದ್ದಾರೆ.
ತಿಮರೋಡಿ ಅವರ ಹೇಳಿಕೆಗಳು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ಮತ್ತು ಭಾವನೆಗಳಿಗೆ ನೋವುಂಟು ಮಾಡುವ ಸಾಮರ್ಥ್ಯವನ್ನು ಹೊಂದಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಮಧ್ಯೆ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಅವರು ಗುರುವಾರ ಮಧ್ಯಾಹ್ನ 1 ಗಂಟೆಯಿಂದ ಶುಕ್ರವಾರ ಮಧ್ಯಾಹ್ನ 1 ಗಂಟೆಯವರೆಗೆ ಕಾನೂನುಬಾಹಿರ ಸಭೆ ನಡೆಸುವುದನ್ನು ತಡೆಯಲು ಬ್ರಹ್ಮಾವರ ಪೊಲೀಸ್ ಠಾಣೆಯ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿದ್ದಾರೆ.
ಗುರುವಾರ, ತಿಮರೋಡಿ ಬಂಧನವನ್ನು ವಿರೋಧಿಸಿ ತಿಮರೋಡಿ ಬೆಂಬಲಿಗರು ಬ್ರಹ್ಮಾವರ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ್ದರು.
ಆಗಸ್ಟ್ 16 ರಂದು ತಿಮರೋಡಿ ಬಿಜೆಪಿ ನಾಯಕ ಬಿ ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಮತ್ತು ಅಶ್ಲೀಲ ಭಾಷೆ ಬಳಸಿದ್ದಾರೆ ಎಂಬ ಫೇಸ್‌ಬುಕ್ ಪೋಸ್ಟ್ ಅನ್ನು ಆಧರಿಸಿ ಪ್ರಕರಣ ದಾಖಲಾಗಿತ್ತು.