ಪರಿಶಿಷ್ಟ ಜಾತಿ/ಪಂಗಡಗಳ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಸಚಿವರು Express photo/ Nagaraja Gadekal
ರಾಜ್ಯ

SC, ST ದೌರ್ಜನ್ಯ ಪ್ರಕರಣ: 60 ದಿನದಲ್ಲಿ ಚಾರ್ಜ್ ಶೀಟ್ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಬ್ಯಾಕ್‌ಲಾಗ್‌ ಹುದ್ದೆ ಭರ್ತಿ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಸರ್ಕಾರ ದಲಿತರ ಪರವಾಗಿದ್ದು, ದಲಿತರಿಗೆ ಸೂಕ್ತ ನ್ಯಾಯ ಒದಗಿಸಲು ಅಡ್ಡಗಾಲು ಹಾಕುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಚಾರ್ಚ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ/ಪಂಗಡಗಳ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ, ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಪ್ರಕರಣಗಳಲ್ಲಿ ಮಾತ್ರ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಈ ಸೂಚನೆ ನೀಡಿದ್ದಾರೆ.

"ಪೊಲೀಸರು ಇದರಲ್ಲಿ ಯಾವುದೇ ನೆಪ ಹೇಳಬಾರದು. ನ್ಯಾಯಾಲಯದಲ್ಲಿ 56 ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11 ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಪ್ರಕರಣಗಳ ಸರಿಯಾದ ವಿಚಾರಣೆ ನಡೆಸಿ, ತ್ವರಿತವಾಗಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.10ರಷ್ಟಿದ್ದು, ಇದು ಹೆಚ್ಚಾಗಬೇಕು. ಆರೋಪಿಗಳ ಜೊತೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದರು.

ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ನ್ಯಾಯಾಲಯಗಳಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳ ಕುರಿತು ತೀರ್ಪು ಬಂದರೂ, ತೀರ್ಪು ಜಾರಿಗೆ ಯಾಕೆ ಬಾಕಿ ಇದೆ. ಪ್ರಸ್ತುತ ಸುಳ್ಳು ಜಾತಿ ಪ್ರಮಾಣ ಪತ್ರ ಸಾಬೀತಾಗಿರುವ 170 ಪ್ರಕರಣಗಳಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆದಿರುವುದು ಸಾಬೀತಾದರೆ ಅದನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಿದ್ದು, ಸಮಗ್ರ ವರದಿಯನ್ನು ಸಲ್ಲಿಸಬೇಕು ಎಂದು ಸೂಚಿಸಿದರು.

ದೌರ್ಜ್ಯನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು ಸಿಎಂ ತಿಳಿಸಿದರು.

ರಾಜ್ಯದಲ್ಲಿ 33 ಡಿಸಿಆರ್‌ಇ ಪೊಲೀಸ್‌ ಠಾಣೆಗಳನ್ನು ತೆರೆಯಲಾಗಿದ್ದು, ಇಲ್ಲಿ ಸಿಬ್ಬಂದಿ ಕೊರತೆಯಿದ್ದರೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು.

ದೌರ್ಜನ್ಯ ಪ್ರಕರಣಗಳಲ್ಲಿ ಪ್ರತಿ ದೂರು ದಾಖಲಿಸುವ ಪ್ರವೃತ್ತಿ ಹೆಚ್ಚುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಪ್ರಕರಣಗಳಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ದೂರಿನಲ್ಲಿ ಸತ್ಯಾಂಶವಿದ್ದರೆ ಮಾತ್ರ ಎಫ್‌ಐಆರ್‌ ದಾಖಲಿಸಬೇಕು.

ರಾಜ್ಯಾದ್ಯಂತ ದೇವದಾಸಿಯರ ಸಮೀಕ್ಷೆ ಕಾರ್ಯವನ್ನು ಈಗಾಗಲೇ ಆರಂಭಿಸಲಾಗಿದ್ದು, ಸಮೀಕ್ಷೆ ಪೂರ್ಣಗೊಂಡ ಬಳಿಕ ದೇವದಾಸಿಯರ ಪುನರ್ವಸತಿಗೆ ಹಾಗೂ ಈ ಪಿಡುಗನ್ನು ಸಂಪೂರ್ಣವಾಗಿ ತೊಲಗಿಸಲು ಯೋಜನೆ ಜಾರಿಗೊಳಿಸಲಾಗುವುದು. ವಿಶೇಷ ಅನುದಾನ ನೀಡುವ ಬಗ್ಗೆಯೂ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನು ಬಾಕಿಯಿರುವ ಬ್ಯಾಕ್‌ಲಾಗ್‌ ಹುದ್ದೆಗಳ ನೇಮಕಾತಿ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಬ್ಯಾಕ್‌ಲಾಗ್‌ ಹುದ್ದೆ ಭರ್ತಿ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಸರ್ಕಾರ ದಲಿತರ ಪರವಾಗಿದ್ದು, ದಲಿತರಿಗೆ ಸೂಕ್ತ ನ್ಯಾಯ ಒದಗಿಸಲು ಅಡ್ಡಗಾಲು ಹಾಕುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT