ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಅಗೆದ ರಸ್ತೆಗಳನ್ನು ದುರಸ್ತಿ ಮಾಡಲು ಸಮಯ ನಿಗದಿಪಡಿಸುವಂತೆ ಅಧಿಕಾರಿಗಳಿಗೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರು ಮಂಗಳವಾರ ಸೂಚನೆ ನೀಡಿದ್ದಾರೆ.
ರಸ್ತೆ ಮತ್ತು ಇತರ ನಾಗರಿಕ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗಾಗಿ ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರು ಮತ್ತು ಒಳಚರಂಡಿ ಮಾರ್ಗಗಳನ್ನು ಹಾಕಲು ಬಿಡಬ್ಲ್ಯೂಎಸ್‌ಎಸ್‌ಬಿ ರಸ್ತೆಗಳನ್ನು ಅಗೆಯುತ್ತಿದೆ. ಆದರೆ, ದುರಸ್ತಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುತ್ತಿಲ್ಲ ಎಂದು ಕಿಡಿಕಾರಿದರು.
ಈ ರಸ್ತೆಗಳನ್ನು ದುರಸ್ತಿ ಮಾಡಲು ಮತ್ತು ಅದಕ್ಕೆ ಅನುಗುಣವಾಗಿ ವೇಳಾಪಟ್ಟಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ನಗರದ ವಿವಿಧ ಭಾಗಗಳಲ್ಲಿ ಸುಮಾರು 7.3 ಕಿ.ಮೀ ರಸ್ತೆಗಳು ಹಾನಿಗೊಳಗಾಗಿವೆ. ದುರಸ್ತಿಗಾಗಿ ನಿರ್ದಿಷ್ಟ ರಸ್ತೆಗಳನ್ನು ಗುರುತಿಸಿ ಪಟ್ಟಿ ಮಾಡಿ. ತಕ್ಷಣ ಕಾಮಗಾರಿ ಕೆಲಸ ಪ್ರಾರಂಭಿಸಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ವೇಳೆ ಪಾದಚಾರಿ ಮಾರ್ಗಗಳು ಮತ್ತು ರಸ್ತೆಬದಿಗಳಲ್ಲಿ ಪ್ರಸ್ತುತ ಅಳವಡಿಸಲಾಗಿರುವ ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸುವಂತೆ ಬೆಸ್ಕಾಂಗೆ ನಿರ್ದೇಶನ ನೀಡಿದರು.
ರಸ್ತೆ ಗುಂಡಿಗಳನ್ನು ಸರಿಪಡಿಸಲು ಮತ್ತು ಸುಧಾರಣಾ ಕಾರ್ಯವನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದರು.