ಚಾಮುಂಡಿ ಬೆಟ್ಟ, ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ, ಎಲ್ಲಾ ಧರ್ಮದವರಿಗೂ ಸೇರಿದ್ದು ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ರಾಜ್ಯಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರಿಗೆ ಆಹ್ವಾನ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್ ಅವರು, ಚಾಮುಂಡಿ ಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ' ಎಂದು ವಿವಾದಿತ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ರಾಜವಂಶಸ್ಥರೂ ಆಗಿರುವ ಮೈಸೂರು ಸಂಸದ ಯದುವೀರ್ ಒಡೆಯರ್, ಡಿಕೆ ಶಿವಕುಮಾರ್ ಹೇಳಿಕೆ ಖಂಡನೀಯ. ಚಾಮುಂಡಿ ಬೆಟ್ಟ ಶಕ್ತಿಪೀಠ ಶಾಸ್ತ್ರಸಮ್ಮತ ಕೋಟ್ಯಂತರ ಹಿಂದೂಗಳ ಪವಿತ್ರ ಸ್ಥಳ. ಕಾಂಗ್ರೆಸ್ ಯಾವಾಗಲೂ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದು ನಕಲಿ ಸೆಕ್ಯುಲರಿಸಂ ಪ್ರದರ್ಶನ ಮಾಡುತ್ತದೆ. ಹಿಂದೂ ಹಬ್ಬಗಳು, ಸಂಪ್ರದಾಯಗಳು ದೇವಾಲಯಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿಯನ್ನು ಸಹಿಸುವುದಿಲ್ಲ ಎಂದಿದ್ದರು. ಯದುವೀರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಡಿಕೆ ಶಿವಕುಮಾರ್ ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ ಎಂದು ಟೀಕಿಸಿದ್ದರು. ಚಾಮುಂಡಿ ಬೆಟ್ಟದ ಕುರಿತ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿರುವ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್, ದಸರಾ ಆಚರಣೆಗಳು ಹಾಗೂ ವಿಶೇಷವಾಗಿ ಚಾಮುಂಡಿ ಬೆಟ್ಟದ ಮೇಲಿರುವ ಪವಿತ್ರ ಚಾಮುಂಡೇಶ್ವರಿ ದೇವಸ್ಥಾನದ ಸುತ್ತ ನಡೆದಿರುವ ರಾಜಕೀಯವು ತೀವ್ರ ಬೇಸರ ಮೂಡಿಸಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಈ ವರ್ಷದ ದಸರಾ ಆಚರಣೆಯ ಬೆಳವಣಿಗೆಗಳು ಕಳವಳಕಾರಿಯಾಗಿವೆ ಎಂದು ಹೇಳಿದ್ದಾರೆ.
ಕಾಸರಗೋಡಿನಿಂದ ಮಂಗಳೂರಿಗೆ ಹೋಗುತ್ತಿದ್ದ KSRTC ಬಸ್ ರಸ್ತೆ ಬದಿ ನಿಂತಿದ್ದ ವ್ಯಕ್ತಿಗಳಿಗೆ ಮತ್ತು ಆಟೋಗೆ ಡಿಕ್ಕಿ ಹೊಡೆದಿದ್ದು, ಮಗು ಸೇರಿ ಆರು ಜನ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ 1.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಬ್ರೇಕ್ ಫೇಲ್ ಆಗಿದ್ದರಿಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಿಂದಕ್ಕೆ ಚಲಿಸಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ವ್ಯಕ್ತಿಗಳಿಗೆ ಹಾಗೂ ಆಟೋಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ 1 ವಾರ ಭಾರಿ ಮಳೆ ಮುನ್ಸೂಚನೆ ಇದ್ದು, ಕರಾವಳಿ ಹಾಗೂ ಒಳನಾಡಿನ 10 ಜಿಲ್ಲೆಗಳಿಗೆ ಭಾರಿ ಮಳೆಯ ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ವಿವಿಧ ಜಿಲ್ಲೆಗಳಿಗೆ ಆರೆಂಜ್ ಮತ್ತು ಯಲ್ಲೋ ಅಲರ್ಟ್ ಘೋಷಿಸಿದೆ. ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನಲ್ಲಿ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಭಾಲ್ಕಿ ತಾಲ್ಲೂಕಿನ ಬಾದಲ್‌ಗಾಂವ್-ಚೊಂಡಿಮುಖೇಡ್‌ನಲ್ಲಿರುವ ದಾಡಗಿ ಸೇತುವೆ ಸೇರಿದಂತೆ ಹಲವಾರು ಸೇತುವೆಗಳ ಮೇಲೆ ನೀರು ಉಕ್ಕಿ ಹರಿದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ರಾಜಧಾನಿ ಬೆಂಗಳೂರಿನ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿರುವ ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಪ್ರಮುಖ ಸಮಸ್ಯೆಗಳನ್ನು ಸರಿಪಡಿಸಿದ್ರೆ ವಿಶ್ವದ ಅತ್ಯುತ್ತಮ ನಗರಗಳಲ್ಲಿ ಒಂದಾಗುತ್ತೆ. ಸಮಸ್ಯೆ ಮೆಟ್ಟಿನಿಲ್ಲಲು ಗ್ರೇಟರ್ ಬೆಂಗಳೂರು ಒಳ್ಳೆ ಅವಕಾಶ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನಗರವು ಯಾವಾಗಲೂ ಉತ್ತಮ ಪ್ರತಿಭೆ ಮತ್ತು ಹವಾಮಾನವನ್ನು ಹೊಂದಿದೆ, ಆದರೆ ರಾಜಕೀಯ ಇಚ್ಛಾಶಕ್ತಿಯ ಕೊರತೆ ಇತ್ತು, ಇದನ್ನು ಬದಲಾಯಿಸಲು ಕಾಂಗ್ರೆಸ್ ಸರ್ಕಾರ ಈಗ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.
ಅಕ್ರಮವಾಗಿ ಆನ್‌ಲೈನ್ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪ, ಆನ್ಲೈನ್ ಮನಿ ಗೇಮ್ಸ್ ಹೆಸರಿನಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಮತ್ತೆ 6 ದಿನಗಳ ಕಾಲ ED ಕಸ್ಟಡಿಗೆ ಕಳಿಸಲಾಗಿದೆ. ಇಂದು ಆರೋಪಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆಗಸ್ಟ್ 22ರ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವೀರೇಂದ್ರ ಪಪ್ಪಿ ಮನೆಗಳ ಮೇಲೆ ದಾಳಿ ನಡೆಸಿದ್ದರು. ನಂತರ ಸಿಕ್ಕಿಂನಿಂದ ಅವರನ್ನು ಬಂಧಿಸಲಾಗಿತ್ತು.