ಯಾದಗಿರಿ: ವಸತಿ ನಿಲಯವೊಂದರ ಶೌಚಾಲಯದಲ್ಲಿಯೇ ಹೈಸ್ಕೂಲ್ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಘಟನೆಯೊಂದು ಯಾದಗಿರಿ ಜಿಲ್ಲೆಯ ಶಹಪುರ ಪಟ್ಟಣದಲ್ಲಿ ನಡೆದಿದೆ.
ಶಹಪುರದಲ್ಲಿರುವ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಶೌಚಾಲಯಕ್ಕೆ ಹೋದಾಗ ಗಂಡುವಿಗೆ ಜನ್ಮ ನೀಡಿದ್ದಾಳೆ. ಈ ಘಟನೆ ವಸತಿ ನಿಲಯದಲ್ಲಿರುವ ಇತರೆ ವಿದ್ಯಾರ್ಥಿನಿಯ ಪೋಷಕರಲ್ಲಿ ಆತಂಕ ಹುಟ್ಟಿಸಿದೆ.
ವಿದ್ಯಾರ್ಥಿನಿಗೆ ಹೆರಿಗೆಯಾದ ಸುದ್ದಿ ತಿಳಿದು ತಕ್ಷಣವೇ ನಗರದ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಇದೀಗ ತಾಯಿ ಮತ್ತು ಮಗುವಿನ ಆರೋಗ್ಯ ಉತ್ತಮವಾಗಿದೆ ಎಂದು ಸರಕಾರಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಘಟನೆ ಕುರಿತು ವಸತಿ ನಿಲಯದ ಮೇಲ್ವಿಚಾರಕಿ ಗೀತಾ ತನಗೆ ಯಾವುದು ಮಾಹಿತಿ ಇಲ್ಲವೆಂದು ಹೇಳಿದ್ದು, ಇದು ಹಲವರ ಹುಬ್ಬೇರುವಂತೆ ಮಾಡಿದೆ.
ಘಟನೆ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಮಕ್ಕಳ ಹಕ್ಕುಗಳ ಆಯೋಗದ ವತಿಯಿಂದ ಅಧಿಕಾರಿಗಳನ್ನು ಆಸ್ಪತ್ರೆಗೆ ಕಳುಹಿಸಿ ಸಮಗ್ರ ಮಾಹಿತಿಯನ್ನು ಕಲೆಹಾಕಿ ವರದಿ ನೀಡುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.