ಬೆಂಗಳೂರು: ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿರುವಂತೆಯೇ ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಪ್ರಮುಖವಾಗಿ ಬೆಂಗಳೂರು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಮೋಡಕವಿದ ವಾತಾವರಣ ಮುಂದುವರೆಯಲಿದೆ ಎಂದು ಹೇಳಿದೆ.
ಬೆಂಗಳೂರು ನಗರದಲ್ಲಿ ಮುಂದಿನ ಐದು ದಿನಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೂಡ ಮುಂದಿನ ಐದು ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ.
ಉಭಯ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರುವ ನಿರೀಕ್ಷೆಯಿದೆ.
ಕರಾವಳಿಗೆ ರೆಡ್ ಅಲರ್ಟ್
ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1 ರಂದು ಸಾಧಾರಣ ಮಳೆಯಾಗಲಿದ್ದು, ಸೆಪ್ಟೆಂಬರ್ 2 ಮತ್ತು 3 ರಂದು ಭಾರಿ ಮಳೆ ಆಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಸೆಪ್ಟೆಂಬರ್ 6ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 2 ಹಾಗೂ 3 ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹಲವಡೆ ವ್ಯಾಪಕ ಮತ್ತು ಇನ್ನು ಕೆಲವೆಡೆ ಸಾಧಾರಣಯಾಗುವ ನಿರೀಕ್ಷೆ ಇದೆ.
ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಸಾಧಾರಣ ಮಳೆ ಆಗುವ ನಿರೀಕ್ಷೆ ಇದೆ.
ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಮಿಂಚಿನಿಂದ ಕೂಡಿದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಎಕ್ಸ್ ನಲ್ಲಿ ಮಾಹಿತಿ ನೀಡಿದೆ.