ಬೆಳಗಾವಿ: ಪಂಚಗ್ಯಾರಂಟಿ ಯೋಜನೆಗಳ ಆಶ್ವಾಸನೆ ಮೂಲಕ ರಾಜ್ಯದಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರಕ್ಕೆ ಆರಂಭದಿಂದಲೂ ಟೀಕೆಗಳು ವ್ಯಕ್ತವಾಗುತ್ತಿದ್ದವು. ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ವಿರೋಧ ಪಕ್ಷದವರು ಮತ್ತು ಜನಸಾಮಾನ್ಯರ ಅಭಿಪ್ರಾಯ ಕೂಡ ಆಗಿದೆ.
ಇದೀಗ ಆಡಳಿತ ಪಕ್ಷ ಕಾಂಗ್ರೆಸ್ ಶಾಸಕರೇ ಗ್ಯಾರಂಟಿಗಳ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಿನ್ನೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ, ಕಾಂಗ್ರೆಸ್ ಶಾಸಕರು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಮುಂದಿನ ಚುನಾವಣೆಗಳನ್ನು ಕೇವಲ ಗ್ಯಾರಂಟಿಗಳನ್ನು ನೆಚ್ಚಿಕೊಂಡು ಎದುರಿಸಲು ಸಾಧ್ಯವಿಲ್ಲ, ಬದಲಿಗೆ ಅಭಿವೃದ್ಧಿ ಯೋಜನೆಗಳತ್ತ ಗಮನ ಹರಿಸುವ ಅಗತ್ಯವಿದೆ ಎಂದು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಂದೆಯೇ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜನಸಾಮಾನ್ಯರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಅಷ್ಟೊಂದು ಉತ್ತಮ ಅಭಿಪ್ರಾಯವಿಲ್ಲ. ರಾಜ್ಯದ ಜನತೆ ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಬಯಸುತ್ತಿದ್ದಾರೆ. ದೇವಸ್ಥಾನಗಳ ಅಭಿವೃದ್ಧಿ, ಸಭಾಭವನಗಳ ನಿರ್ಮಾಣ, ರಸ್ತೆಗಳ ಸುಧಾರಣೆ, ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾರ್ಯಗಳಿಗೆ ನೆರವು ಬಯಸುತ್ತಿದ್ದಾರೆ. ಕೇವಲ ಗ್ಯಾರಂಟಿ ಯೋಜನೆಗಳ ಮೇಲೆ ಅವಲಂಬಿತವಾಗಿದ್ದರೆ ಜನರಿಗೆ ಬೇಕಾದ ಇತರ ಮೂಲಭೂತ ಸೌಕರ್ಯಗಳು ಮತ್ತು ಅಭಿವೃದ್ಧಿ ಕಾರ್ಯಗಳು ಹಿನ್ನಡೆ ಅನುಭವಿಸುತ್ತವೆ. ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಡಬೇಕಾದ ಅನುದಾನದ ಕೊರತೆ ಎದುರಾಗಿದೆ ಎಂದು ಸಭೆಯಲ್ಲಿ ಕಾಂಗ್ರೆಸ್ ಶಾಸಕರು ಕಳವಳ ವ್ಯಕ್ತಪಡಿಸಿದ್ದಾರೆ.
ಶ್ರೀಮಂತರಿಗೇಕೆ ಉಚಿತ ಭಾಗ್ಯಗಳು?
ಎಂಎಲ್‌ಸಿ ಸುಧಾಮ್ ದಾಸ್ ಅವರು ಸಿಎಲ್‌ಪಿ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಮರುಪರಿಶೀಲನೆಗೆ ಆಗ್ರಹಿಸಿದ್ದಾರೆ. ಸಭೆಯಲ್ಲಿ ಅವರು ಬೆಂಗಳೂರಿನ ಸದಾಶಿವನಗರದಂತಹ ಶ್ರೀಮಂತ ಪ್ರದೇಶದಲ್ಲಿರುವ ಮನೆಗಳಿಗೂ 200 ಯೂನಿಟ್ ವಿದ್ಯುತ್ ಉಚಿತ, ಲಕ್ಷಾಂತರ ರೂಪಾಯಿ ದುಡಿಯುವ ಮಹಿಳೆಯರಿಗೂ ಬಸ್ ಪ್ರಯಾಣ ಉಚಿತ ನೀಡಬೇಕಾ ಎಂದು ಪ್ರಶ್ನಿಸಿದ್ದಾರೆ. ಉಳ್ಳವರಿಗೂ ಉಚಿತ ಸೌಲಭ್ಯಗಳನ್ನು ನೀಡುವುದರಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುವುದಲ್ಲದೆ, ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಅವರ ಈ ಹೇಳಿಕೆಗೆ ಹಲವು ಶಾಸಕರು ಸಹಮತ ವ್ಯಕ್ತಪಡಿಸಿದ್ದು, ಗ್ಯಾರಂಟಿ ಯೋಜನೆಗಳಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಯನ್ನು ಪರಿಷ್ಕರಿಸುವಂತೆ ಒತ್ತಾಯಿಸಿದ್ದಾರೆ.