ಬೆಂಗಳೂರು: ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಸಂಜೆ ವಿಧಿವಶರಾಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ 94 ವರ್ಷದ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನೆಲೆಯಲ್ಲಿ ಡಿ.15ರಂದು ದಾವಣಗೆರೆ ನಗರ ವ್ಯಾಪ್ತಿಯ ಎಲ್ಲಾ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿ ರಜೆ ಘೋಷಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರ ಬೆಂಗಳೂರಿನಲ್ಲಿದ್ದು ನಾಳೆ ಬೆಳಗ್ಗೆ 6 ಗಂಟೆಗೆ ದಾವಣಗೆರೆ ತಲುಪಲಿದೆ. ಎಸ್ಎಸ್ ಮಲ್ಲಿಕಾರ್ಜುನ ಅವರ ಮನೆಯಲ್ಲಿ ಬೆಳಗ್ಗೆ 7ರಿಂದ ಮಧ್ಯಾಹ್ನ 12 ಗಂಟೆವರೆಗೆ ಇಡಲಾಗುತ್ತೆ. ನಂತರ ಹೈಸ್ಕೂಲ್ ಮೈದಾನದಲ್ಲಿ ಸಂಜೆ 4ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಾಳೆ ಸಂಜೆಯೊಳಗೆ ಕಲ್ಲೇಶ್ವರ ರೈಸ್ ಮಿಲ್ ಜಾಗದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ ನಡೆಸಲಾಗುತ್ತದೆ.
ಸಿಎಂ ಸಿದ್ದರಾಮಯ್ಯ ಸಂತಾಪ
ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಆದ ಶಾಮನೂರು ಶಿವಶಂಕರಪ್ಪ ಅವರ ನಿಧನವಾರ್ತೆ ನೋವುಂಟುಮಾಡಿದೆ. ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ಮುತ್ಸದ್ದಿ ನಾಯಕನ ಅಗಲಿಕೆಯಿಂದ ಸಮಾಜ ಬಡವಾಗಿದೆ. ದಾವಣಗೆರೆ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಿದ ಶಿವಶಂಕರಪ್ಪನವರ ಕಾರ್ಯಗಳು ಅವರನ್ನು ಜನಮಾನಸದಲ್ಲಿ ಚಿರಸ್ಥಾಯಿಯಾಗಿಸಲಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಮತ್ತವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.