ಬೆಂಗಳೂರು: ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಹೈಕೋರ್ಟ್ ವಕೀಲರೊಬ್ಬರು ಸಾವಿಗೀಡಾಗಿದ್ದಾರೆ. ನಂತರ ಆ ಕಾರು ದ್ವಿಚಕ್ರ ವಾಹನಕ್ಕೂ ಡಿಕ್ಕಿ ಹೊಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಎನ್. ರಾಮಚಂದ್ರ ರೆಡ್ಡಿ (61) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಕೂಟರ್ ಸವಾರಿ ಮಾಡುತ್ತಿದ್ದ ಭರತ್ (19) ಮತ್ತು ಹಿಂಬದಿ ಕುಳಿತಿದ್ದ ಸ್ವಾತಿ (23) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಡಿಸೆಂಬರ್ 17 ರಂದು ಸಂಜೆ 7.28ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಸಂಜಯ್‌ನಗರ ಪ್ರದೇಶದ ಡಾಲರ್ಸ್ ಕಾಲೋನಿಯ ಆರ್‌ಎಂವಿ ಕ್ಲಬ್ ಬಳಿ ರೆಡ್ಡಿ ರಸ್ತೆ ದಾಟುತ್ತಿದ್ದಾಗ, ಅತಿವೇಗದಿಂದ ಬಂದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ನಂತರ ಅದೇ ಕಾರು ಮುಂದಿನ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ನಿಲ್ಲಿಸಿದ್ದ ಮತ್ತೆರಡು ಕಾರುಗಳಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಭಾಗಿಯಾದ ಎಲ್ಲ ವಾಹನಗಳಿಗೆ ಹಾನಿಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರೆಡ್ಡಿಯನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಸ್ಕೂಟರ್ ಸವಾರರಿಬ್ಬರನ್ನು ಚಿಕಿತ್ಸೆಗಾಗಿ ಶಿರಡಿ ಸಾಯಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರು ಚಾಲಕ ಶಿಶಿರ್ ಪಾಟೀಲ್ (18) ಎಂಬಾತನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸದ್ಯ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಅಪಘಾತವು ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಸಂಭವಿಸಿದೆ ಎಂದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 281 (ಸಾರ್ವಜನಿಕ ರಸ್ತೆಯಲ್ಲಿ ಅತಿವೇಗದ ಚಾಲನೆ ಅಥವಾ ಸವಾರಿ), 125(2) (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕೃತ್ಯ) ಮತ್ತು 106 (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.