ದೆಹಲಿ ಪ್ರವಾಸದಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ತ್ವರಿತ ಅನುಮೋದನೆಗೆ ಮನವಿ ಮಾಡಿದ್ದಾರೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿಯಾದ ಡಿಸಿಎಂ, ನಮ್ಮ ಮೆಟ್ರೋ 2ನೇ ಹಂತದ ಪರಿಷ್ಕೃತ ದರಕ್ಕೆ ಒಪ್ಪಿಗೆ ಹಾಗೂ ಮೆಟ್ರೋ 3ನೇ 'ಎ' ಹಂತಕ್ಕೆ ಅಗತ್ಯ ಅನುಮೋದನೆ, ಮಿಟ್ಟಗಾನಹಳ್ಳಿ ಕೆರೆ ಬಳಿ ನಾನಾ ಹಂತದ ತ್ಯಾಜ್ಯ ವಿಲೇವಾರಿಗೆ ಅನುಮತಿ, ಅಲ್ಲದೆ, ಸರ್ಜಾಪುರ–ಹೆಬ್ಬಾಳ ಸಂಪರ್ಕ ಕಲ್ಪಿಸುವ 36.59 ಕಿ.ಮೀ ಉದ್ದದ ಬೆಂಗಳೂರು ಮೆಟ್ರೋ ಹಂತ–3ಎ ಯೋಜನೆ ಸೇರಿದಂತೆ ಬೆಂಗಳೂರಿನ ಅಭಿವೃದ್ಧಿಗೆ ಅಗತ್ಯವಾಗಿರುವ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು. ಇದೇ ವೇಳೆ ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ನಮ್ಮ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರನ್ನು ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಡಿಕೆ ಶಿವಕುಮಾರ್ ಮನವಿ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ಕೆಟ್ಟ ಕಮೆಂಟ್ ಪೋಸ್ಟ್ ಮಾಡಿದ ಖಾತೆಗಳ ವಿರುದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ. ಈಗ ವೇದಿಕೆ, ಟಿವಿ ಚಾನೆಲ್‌ಗಳಲ್ಲಿ ಮಾತನಾಡುತ್ತಾರೆ. ದರ್ಶನ್ ಇದ್ದಾಗ ಇವರೆಲ್ಲಾ ಇದ್ರೋ? ಇರಲಿಲ್ವೋ ಎಂದು ಪ್ರಶ್ನಿಸಿ ದಾವಣಗೆರೆಯಲ್ಲಿ ವಿಜಯಲಕ್ಷ್ಮಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ವಿಜಯಲಕ್ಷ್ಮಿ ಅವರ ಗುರಿಯಾಗಿಸಿಕೊಂಡು ನಿಂದನೆ ಪೋಸ್ಟ್ ಮಾಡಲಾಗುತ್ತಿತ್ತು. ಇದೀಗ ತಮ್ಮನ್ನು ನಿಂದಿಸಿದವರ ವಿರುದ್ಧ ಸಿಡಿದೆದ್ದಿರುವ ವಿಜಯಲಕ್ಷ್ಮಿ 15 ಇನ್‌ಸ್ಟಾಗ್ರಾಂ ಐಡಿ ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್ ವಿರುದ್ಧ ಫೋಟೋ ಸಮೇತ ದೂರು ದೂರು ನೀಡಿದ್ದಾರೆ. ವಿಜಯಲಕ್ಷ್ಮೀ ಖಾತೆಗೆ ಬಂದ ಕಾಮೆಂಟ್ಗಳು ಸುದೀಪ್ ಅಭಿಮಾನಿಗಳದ್ದೇ ಎಂಬ ಅನುಮಾನ ಮೂಡಿದೆ. ಕಾರಣ ಕೆಲವು ಖಾತೆಗಳು ಸುದೀಪ್ ಅಭಿಮಾನಿಗಳ ಹೆಸರಲ್ಲಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 50ಕ್ಕೂ ಹೆಚ್ಚು ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ 7 ಮನೆ, ಕೊಡಗಿನಲ್ಲಿ 2 ಕಾಫಿ ಎಸ್ಟೇಟ್ ಸೇರಿದಂತೆ 10 ಕಡೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಸರ್ದಾರ್ ಸರ್ಫರಾಜ್ ಖಾನ್ ವಸತಿ ಇಲಾಖೆಗೆ ನಿಯೋಜನೆಗೊಂಡಿರುವ ಅಧಿಕಾರಿಯಾಗಿದ್ದು ಆತನ ವಿರುದ್ಧ ಅಕ್ರಮ ಆಸ್ತಿ ಗಳಿಕೆಯ ಕುರಿತು ಪ್ರಕರಣ ದಾಖಲಾಗಿತ್ತು. ಆಪ್ತ ಕಾರ್ಯದರ್ಶಿ ಮನೆ ಮೇಲಿನ ಲೋಕಾಯುಕ್ತ ದಾಳಿ ಕುರಿತಂತೆ ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹ್ಮದ್ ಖಾನ್, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ದಾಳಿ ಯಾಕೆ ನಡೆದಿದೆ ಎಂಬುದು ನನಗೆ ತಿಳಿದಿಲ್ಲ. ಏನಾಗಿದೆ ಎಂಬುದನ್ನು ನೋಡೋಣ ಎಂದು ಹೇಳಿದರು.
ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ಗೆ ಭಾರಿ ಮುಖಭಂಗವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್, ಉತ್ತರ ಕನ್ನಡದ ಮಂಕಿ ಪಟ್ಟಣ ಪಂಚಾಯತ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ್ಗಳಲ್ಲಿ ಬಿಜೆಪಿ ಬಹುಮತ ಪಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರಸಭೆ ಮತ್ತು ರಾಯಚೂರು ಜಿಲ್ಲೆಯ ತುರವಿಹಾಳ ಪಟ್ಟಣ ಪಂಚಾಯತ್ಗಳ ತಲಾ 1 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿಯೂ ಬಿಜೆಪಿಗೆ ಗೆಲುವಿನ ನಗೆ ಬೀರಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.
ಸಿಎಂ ಬದಲಾವಣೆ ವದಂತಿಯನ್ನು ಡಿಸಿಎಂ ಡಿಕೆ ಶಿವಕುಮಾರ್ ತಳ್ಳಿ ಹಾಕಿದ್ದು, ಮುಖ್ಯಮಂತ್ರಿ ಕುರ್ಚಿಗಾಗಿ ವಿವಾದವೇನೂ ಇಲ್ಲ. ಉಪ ಮುಖ್ಯಮಂತ್ರಿಯಾಗಿ ಮುಂದುವರಿಯಲು ನನಗೆ ತೃಪ್ತಿ ಇದೆ ಎಂದಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಿವಕುಮಾರ್, ಆಂತರಿಕ ಭಿನ್ನಾಭಿಪ್ರಾಯಗಳು ಅಥವಾ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಸಭೆ ಎಂಬಿತ್ಯಾದಿ ವದಂತಿಗಳು ಮಾಧ್ಯಮಗಳಲ್ಲಿ ಮಾತ್ರ ಬರುತ್ತಿದೆ. ನಾನು ಯಾವುದೇ ಎಐಸಿಸಿ ವರಿಷ್ಠರನ್ನೂ ಭೇಟಿ ಮಾಡುತ್ತಿಲ್ಲ. ಪಕ್ಷದ ಕಾರ್ಯಕರ್ತನಾಗಿರಲು ಇಷ್ಟಪಡುತ್ತೇನೆ ಎಂದು ಹೇಳುವ ಮೂಲಕ ರಾಜ್ಯದಲ್ಲಿನ ಮುಖ್ಯಮಂತ್ರಿ ಬದಲಾವಣೆ ಅಥವಾ ಸಂಭಾವ್ಯ ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ತೆರೆ ಎಳೆದರು.