ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಕೋರಿ ಮತ್ತೊಮ್ಮೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಕರಣದ 5ನೇ ಆರೋಪಿ ಬಿ.ಎ. ಬಸವರಾಜ ಅಲಿಯಾಸ್ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರವಷ್ಟೇ ವಜಾಗೊಳಿಸಿತ್ತು.
ಹೀಗಾಗಿ ಬೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಕೋರಿ ಬುಧವಾರ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಭಾರತಿನಗರ ಠಾಣೆ ಪೊಲೀಸರನ್ನು ಪ್ರತಿವಾದಿಯನ್ನಾಗಿಸಲಾಗಿದ್ದು, ಅರ್ಜಿಯು ನ್ಯಾಯಮೂರ್ತಿ ಜಿ. ಬಸವರಾಜ ಅವರ ರಜಾಕಾಲದ ನ್ಯಾಯಪೀಠದ ಮುಂದೆ ಶುಕ್ರವಾರ (ಡಿ.26) ವಿಚಾರಣೆಗೆ ನಿಗದಿಯಾಗಿದೆ.
ಈ ಹಿಂದೆ ವಿಚಾರಣೆ ನಡೆಸಿದ್ದ ಹೈಕೋರ್ಟ್, ಆರೋಪಿಗಳ ವಿರುದ್ಧ ಕೊಕಾ ಅನ್ವಯಿಸಿದ್ದ ಆದೇಶವನ್ನು ಡಿಸೆಂಬರ್ 19ರಂದು ರದ್ದುಪಡಿಸಿತ್ತಲ್ಲದೆ, ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.
ಇನ್ನು ಭಾರತಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೈರತಿ ಬಸವರಾಜ್ ಹಿಂಪಡೆದ ಕಾರಣ ಆ ಅರ್ಜಿಯೂ ವಜಾಗೊಂಡಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಹ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ನಿರಾಕರಿಸಿದ್ದರಿಂದ, ಬಂಧನ ಭೀತಿಯಿಂದ ಮತ್ತೊಮ್ಮೆ ಬೈರತಿ ಬಸವರಾಜ್ ಹೈಕೋರ್ಟ್ ಕದ ತಟ್ಟಿದ್ದಾರೆ.