ಬೆಂಗಳೂರು: ನಗರದ ಹೊರವಲಯದಲ್ಲಿ ಕಾರೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಇಬ್ಬರು ಸಾವಿಗೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಮೃತರನ್ನು ಹರೀಶ್ ಶಾಸ್ತ್ರಿ (39) ಮತ್ತು ಅವರ ತಂದೆ ವೀರಭದ್ರ (80) ಎಂದು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಡಿಸೆಂಬರ್ 25 ರಂದು ಸಂಜೆ 6 ಗಂಟೆ ಸುಮಾರಿಗೆ ಕುಟುಂಬವು ತೋಟಕ್ಕೆ ಭೇಟಿ ನೀಡಿ ಮನೆಗೆ ಹಿಂತಿರುಗುತ್ತಿದ್ದಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ತೋಟಗೆರೆ ಕ್ರಾಸ್‌ನಲ್ಲಿ ಅಪಘಾತ ಸಂಭವಿಸಿದೆ.
ಪ್ರಾಥಮಿಕ ತನಿಖೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಹರೀಶ್ ಮತ್ತು ವೀರಭದ್ರ ಸ್ಥಳದಲ್ಲೇ ಸಾವಿಗೀಡಾದರೆ, ತೀವ್ರವಾಗಿ ಗಾಯಗೊಂಡ ಕುಟುಂಬದ ಇತರ ಸದಸ್ಯರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.