ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ ಬಿ-ಖಾತಾ ಅಭಿಯಾನ ಈಗ ರಾಜ್ಯಾದ್ಯಂತ ವಿಸ್ತರಣೆ ಆಗಿದೆ. ಬಿ-ಖಾತಾ ಪಡೆಯಲು 3 ತಿಂಗಳು ಡೆಡ್ ಲೈನ್ ನೀಡಲಾಗಿದ್ದು One Time Solution ಅಡಿ 3 ತಿಂಗಳ ಒಳಗೆ ಬಿ-ಖಾತಾ ಮಾಡಿಸಿಕೊಳ್ಳಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೆ ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ಅನುಮತಿ ಇಲ್ಲ. ಅನಧಿಕೃತ ಬಡಾವಣೆಗಳು ತಲೆ ಎತ್ತಿದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳು, ಯೋಜನಾ ನಿರ್ದೇಶಕರು, ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದ ಮಾತನಾಡಿದ ಸಿದ್ದರಾಮಯ್ಯ, 11 ಮಹಾ ನಗರಪಾಲಿಕೆಗಳು ಒಳಗೊಂಡಂತೆ 316 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ-ಖಾತಾ ನೀಡಲು ಸರ್ಕಾರ ಮುಂದಾಗಿದೆ. ಇನ್ನು ರಾಜ್ಯದಲ್ಲಿ ಸುಮಾರು 40 ಲಕ್ಷ ಆಸ್ತಿಗಳು ಅನಧಿಕೃತವಾಗಿದ್ದು, ಇದರಿಂದ 4 ಸಾವಿರ ಕೋಟಿ ರೂ ಆದಾಯ ನಿರೀಕ್ಷಿಸಲಾಗಿದೆ.
ಹಣಕಾಸಿನ ವಿಚಾರದಲ್ಲಿ ಉಂಟಾದ ಕೌಟುಂಬಿಕ ಸಮಸ್ಯೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರಿನ ಸಮೀಪದ ಹಂಚ್ಯಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಮೃತರನ್ನು ಜೋಶ್ ಆಂಥೋನಿ, ಆತನ ಸಹೋದರ ಜೋಬಿ ಆಂಥೋನಿ ಮತ್ತು ಪತ್ನಿ ಶರ್ಮಿಳಾ ಎಂದು ಗುರುತಿಸಲಾಗಿದೆ. ಜೋಬಿ ಆಂಥೋನಿ ಮತ್ತು ಶರ್ಮಿಳಾ ಐಪಿಎಲ್ ಕ್ರಿಕೆಟ್ ಪಂದ್ಯಗಳು ಮತ್ತು ಆನ್‌ಲೈನ್ ಗೇಮಿಂಗ್‌ನಲ್ಲಿ ಬೆಟ್ಟಿಂಗ್ ಕಟ್ಟುವ ಮೂಲಕ ಹಣ ಕಳೆದುಕೊಂಡಿದ್ದರು. ಸಾಲಗಾರರು ಹಣ ವಾಪಸ್ ನೀಡುವಂತೆ ಒತ್ತಾಯಿಸುತ್ತಿದ್ದರು. ಒತ್ತಡಕ್ಕೆ ಸಿಲುಕಿದ ಜೋಶ್ ಆಂಥೋನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವಿಷಯ ತಿಳಿದ ನಂತರ ಜೋಬಿ ಆಂಥೋನಿ, ಶರ್ಮಿಳಾ ಆತ್ಮಹತ್ಯೆ ಮಾಡಿದ್ದಾರೆ.
ಕಾರವಾರ ನೌಕಾ ನೆಲೆಯ ಕುರಿತಾದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ NIA ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ವೆತನಾ ತಾಂಡೆಲ್ ಮತ್ತು ಅಕ್ಷಯ್ ನಾಯಕ್ ಎಂದು ಗುರುತಿಸಲಾಗಿದೆ. ಹೈದರಾಬಾದ್‌ನ ತಂಡವೊಂದು ಸೋಮವಾರ ಕಾರವಾರಕ್ಕೆ ಆಗಮಿಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ ವಿಚಾರವಾಗಿ 2024ರ ಆಗಸ್ಟ್ ತಿಂಗಳಲ್ಲಿ ಮೂವರನ್ನು ವಿಚಾರಣೆ ನಡೆಸಿದ್ದ ಎನ್ಐಎ ನೋಟೀಸ್ ನೀಡಿ ಕಳುಹಿಸಿತ್ತು. ಆರೋಪಿಗಳು ಹಣಕ್ಕಾಗಿ ಪಾಕಿಸ್ತಾನಕ್ಕೆ ಕಾರವಾರ ನೌಕಾ ನೆಲೆಯ ಫೋಟೋಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿ, ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿ 72 ಗಂಟೆಯೊಳಗೆ ಉತ್ತರಿಸುವಂತೆ ಸೂಚಿಸಿತ್ತು. ಇದಕ್ಕೆ ಯತ್ನಾಳ್ 12 ಪುಟಗಳಲ್ಲಿ ಉತ್ತರಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರೇ ಬಣ ರಾಜಕೀಯ ಮಾಡುತ್ತಿದ್ದಾರೆ. ನಾನು ಯಾವುದೇ ಬಣ ರಾಜಕೀಯ ಮಾಡಿಲ್ಲ. ಪಕ್ಷದ ಶಿಸ್ತನ್ನು ನಾನು ಉಲ್ಲಂಘಿಸಿಲ್ಲ. ಪಕ್ಷದ ಚೌಕಟ್ಟಿನಲ್ಲೇ ವಕ್ಫ್ ವಿರುದ್ಧ ಹೋರಾಟ ನಡೆಸಿದ್ದೇವೆ. ಪಕ್ಷಕ್ಕೆ ಧಕ್ಕೆಯಾಗುವಂತಹ ಯಾವ ಕೆಲಸವನ್ನೂ ಮಾಡಿಲ್ಲ. ರಾಜ್ಯದಲ್ಲಿ ಕುಟುಂಬ ರಾಜಕಾರಣ ಮತ್ತು ಸ್ವಜನಪಕ್ಷಪಾತ ಕೊನೆಗೊಳ್ಳಬೇಕು. ಹೀಗಾಗಿ ವಿಜಯೇಂದ್ರ ಬದಲಾವಣೆ ಅನಿವಾರ್ಯ ಎಂದು ಯತ್ನಾಳ್ ಪ್ರತಿಪಾದಿಸಿದ್ದಾರೆ.
ಬಿಸಿಯೂಟ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿಯಲ್ಲಿ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ವಿತರಣೆ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 1 ರಿಂದ 10ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ರೂಪದಲ್ಲಿ ವಿತರಿಸಲಾಗುತ್ತಿರುವ ಚಿಕ್ಕಿಯಲ್ಲಿ ಕೊಬ್ಬಿನಾಂಶ ಹೆಚ್ಚಿಗೆ ಇದ್ದು, ಇದರಲ್ಲಿ ಸಕ್ಕರೆ ಅಂಶ ಕೂಡ ಅಧಿಕವಾಗಿದೆ. ಇದು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಇರುವುದರಿಂದ ವಿತರಣೆ ಸ್ಥಗಿತಗೊಳಿಸಿ, ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಮತ್ತೊಂದೆಡೆ ಹುಬ್ಬಳ್ಳಿಯಲ್ಲಿ 4 ಲಕ್ಷ ಮೌಲ್ಯದ ಅಂಗನವಾಡಿ ಮಕ್ಕಳಿಗೆ ವಿತರಿಸುವ ಪೌಷ್ಟಿಕ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದ ಆರೋಪದಡಿ 18 ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಒಟ್ಟು 26 ಜನರನ್ನು ಬಂಧಿಸಲಾಗಿದೆ.