ಬೆಂಗಳೂರು: ಪ್ರಭಾವಿ ವ್ಯಕ್ತಿಗಳ ವಿರುದ್ಧದ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದಿರುವ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಈ ಕ್ರಮ ನಿಯಮಬಾಹಿರವಾಗಿದ್ದರೆ ಒಪ್ಪುವುದಿಲ್ಲ ಎಂದು ಹೇಳಿದೆ.
ಬೆಂಗಳೂರಿನ ವಕೀಲ ಗಿರೀಶ್ ಭಾರದ್ವಾಜ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ. ಐ. ಅರುಣ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವೆಂಕಟೇಶ್ ಪಿ.ದಳವಾಯಿ ವಾದ ಆಲಿಸಿದ ನ್ಯಾಯಪೀಠ, ‘ಪ್ರಕರಣ ಗಂಭೀರವಾಗಿದೆ ಎಂಬುದನ್ನು ಮೇಲ್ನೋಟಕ್ಕೇ ಮನದಟ್ಟು ಮಾಡುವಲ್ಲಿ ಅರ್ಜಿದಾರರು ಯಶಸ್ವಿಯಾಗಿದ್ದಾರೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.
ಅರ್ಜಿದಾರರ ಪರ ವಕೀಲರು ಪ್ರಭಾವಿ ವ್ಯಕ್ತಿಗಳೂ ಸೇರಿದಂತೆ ಕೆಲವು ರಾಜಕಾರಣಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಅಪರಾಧ ದಂಡ ಸಂಹಿತೆ ಸೆಕ್ಷನ್ 321ಕ್ಕೆ ವಿರುದ್ಧವಾಗಿ ಸರಕಾರ ಹಿಂಪಡೆದಿದೆ ಎಂದು ಹೇಳಿರುವುದು ಮೇಲ್ನೋಟಕ್ಕೆ ಸಮರ್ಥನೀಯವಾಗಿದೆ. ಅಭಿಯೋಜನಾ ಇಲಾಖೆ ಪ್ರಕರಣಗಳು ವಾಪಸ್ ಪಡೆಯಲು ಅರ್ಹವಲ್ಲವೆಂದು ಹೇಳಿದ್ದರೂ ಸರಕಾರ ತನ್ನ ವ್ಯಾಪ್ತಿ ಮೀರಿ ಕ್ರಮ ಕೈಗೊಂಡಿದೆ. ಹಾಗಾಗಿ, ಸಚಿವ ಸಂಪುಟದ ಕ್ರಮ ನಿಯಮಬಾಹಿರವಾಗಿದ್ದರೆ ಕೋರ್ಟ್‌ಗಳು ಒಪ್ಪುವುದಿಲ್ಲ, ಪ್ರಕರಣಗಳನ್ನು ಹಿಂಪಡೆಯಲು ಅನುಮತಿ ನೀಡುವುದಿಲ್ಲ ಎಂದು ಹೇಳಿ, ಪ್ರತಿವಾದಿಗಳಾದ ರಾಜ್ಯ ಸರ್ಕಾರ, ಪ್ರಾಸಿಕ್ಯೂಷನ್, ಕಾನೂನು ಮತ್ತು ಪೊಲೀಸ್ ಇಲಾಖೆಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿತು.