News Headlines 02-01-25 | ಜನತೆಗೆ KSRTC-BMTC ಬಸ್ ದರ ಏರಿಕೆ ಶಾಕ್; ಪ್ರಿಯಾಂಕ್ ಖರ್ಗೆ ವಿರುದ್ಧ ರಾಹುಲ್‌ಗೆ BJP ದೂರು; ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ ಪತಿಯನ್ನು ಕೊಂದ ಪತ್ನಿ!
1. ಜನತೆಗೆ KSRTC-BMTC ಬಸ್ ದರ ಏರಿಕೆ ಶಾಕ್
ಹೊಸ ವರ್ಷದ ಆರಂಭದಲ್ಲಿ ರಾಜ್ಯ ಸರ್ಕಾರ ಬಸ್ ಪ್ರಯಾಣಿಕರಿಗೆ ಆಘಾತಕಾರಿ ಸುದ್ದಿ ನೀಡಿದೆ. KSRTC ಮತ್ತು BMTC ಸೇರಿದಂತೆ ನಾಲ್ಕೂ ನಿಗಮಗಳ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಿಸಲು ಅನುಮೋದನೆ ನೀಡಲಾಗಿದೆ. BMTC, KSRTC, NWKRTC ಮತ್ತು KKRTC ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳು ಈ ಹಿಂದೆ ಶೇ. 40ರಷ್ಟು ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಡೀಸೆಲ್ ಬೆಲೆಯ ಏರಿಕೆಯನ್ನು ಗಮನಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ತಿಳಿಸಿದ್ದಾರೆ.
2. ಪ್ರಿಯಾಂಕ್ ಖರ್ಗೆ ವಿರುದ್ಧ ರಾಹುಲ್‌ಗೆ BJP ದೂರು
ಬೀದರ್ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದಲ್ಲಿ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಪಾತ್ರವಿದೆ ಎಂಬ ವಿವಾದದ ನಡುವೆಯೇ, ಭಾರತೀಯ ಜನತಾ ಪಕ್ಷವು ರಾಜ್ಯ ಘಟಕವು ಗುತ್ತಿಗೆದಾರ ಸಚಿನ್ ಪಾಂಚಾಲ್ ಅವರ ಡೆತ್ ನೋಟ್ ಅನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಳುಹಿಸಿದೆ. ಡೆತ್ ನೋಟ್ ನ ನೋಂದಾಯಿತ ಪ್ರತಿಯನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಕಳುಹಿಸಲಾಗಿದೆ. ಆದರೆ, ಈ ಪ್ರಕರಣದಲ್ಲಿ ಬಿಜೆಪಿಗೆ ಮುಖಭಂಗವಾಗಲಿದೆ ಎಂದು ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಸಚಿನ್ ಪಾಂಚಲ್ ಡೆತ್ ನೋಟ್ ನಲ್ಲಿ ನನ್ನ ಹೆಸರು ಏಲ್ಲಿದೆ ಎಂದು ಪ್ರಶ್ನಿಸಿದರು. ಇದೇ ವೇಳೆ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರ ಆಡಿಯೋವೊಂದನ್ನು ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿದ್ದು ಆತನ ಮೇಲೆ ಸುಮಾರು 20ರಿಂದ 30 ಪ್ರಕರಣಗಳು ದಾಖಲಾಗಿವೆ. ಆದರೂ ಬಿಜೆಪಿ ಈತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.
3. ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ: ಐವತ್ತು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮ
ಬೆಂಗಳೂರಿನ ಮಹದೇವಪುರ ಬಳಿಯ ಬೈಕ್ ಶೋರೂಂವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ ಐವತ್ತು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ. ನಿನ್ನೆ ರಾತ್ರಿ ಈ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್‌ಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಪಕ್ಕದಲ್ಲೇ ಇದ್ದ ಮತ್ತೊಂದು ಶೋರೂಂಗೂ ಬೆಂಕಿ ವ್ಯಾಪಿಸಿದ್ದು ಕೂಡಲೇ ಎಚ್ಚೆತ್ತ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
4. ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ ಪತಿಯನ್ನು ಕೊಂದ ಪತ್ನಿ
ದೈಹಿಕ ಸಂಪರ್ಕಕ್ಕೆ ತಾನು ಒಪ್ಪಿಲ್ಲವೆಂಬ ಕಾರಣಕ್ಕೆ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪತಿಯನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಪತ್ನಿಯೇ ಕೊಲೆ ಮಾಡಿರುವ ಘಟನೆ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ. ಉಮರಾಣಿ ಗ್ರಾಮದ ಶ್ರೀಮಂತ ಇಟ್ನಾಳೆ ಎಂಬಾತನನ್ನು ಕೊಲೆ ಮಾಡಿ, ಮೃತ ದೇಹವನ್ನು ಎರಡು ತುಂಡಾಗಿ ಕತ್ತರಿಸಿ ಪಕ್ಕದ ಗದ್ದೆಯಲ್ಲಿ ಎಸೆದಿದ್ದ ಆತನ ಪತ್ನಿ ಸಾವಿತ್ರಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಮೀನಿನಲ್ಲಿ ಶವ ಕಂಡ ಸ್ಥಳೀಯರು ಚಿಕ್ಕೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
5. ಬಾಣಂತಿಯರ ಸಾವು: ದಿನೇಶ್ ಗುಂಡೂರಾವ್ ರಾಜಿನಾಮೆಗೆ ಅಶೋಕ್ ಆಗ್ರಹ
ಕಾಂಗ್ರೆಸ್ ನಾಯಕರು ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು, ಬಾಣಂತಿಯರ ಬದುಕಿಗೆ ಗ್ಯಾರಂಟಿ ನೀಡಿದರೆ ಸಾಕು ಎಂದಿರುವ ವಿಪಕ್ಷ ನಾಯಕ ಆರ್. ಅಶೋಕ್, ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಬಾಣಂತಿಯರ ಮರಣ ಮೃದಂಗ ಇನ್ನೂ ನಿಂತಿಲ್ಲ. ಒಟ್ಟು 736 ತಾಯಂದಿರು ಮೃತಪಟ್ಟಿದ್ದಾರೆ. ಇದು ಸರ್ಕಾರದ ಪ್ರಾಯೋಜಿತ ಕೊಲೆಯಾಗಿದ್ದು, ಸರ್ಕಾರವೇ ನೇರ ಹೊಣೆಯಾಗಿದೆ. ಹುಬ್ಬಳ್ಳಿಯಲ್ಲಿ ಬಾಣಂತಿ ಸತ್ತಿದ್ದಕ್ಕೆ ಅವರ ಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಿಪಟೂರಿನಲ್ಲೂ ಒಬ್ಬ ಬಾಣಂತಿ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಪೂರೈಸಿದ ಐವಿ ದ್ರಾವಣದಿಂದಾಗಿ ಬಾಣಂತಿಯರು ಸಾವನ್ನಪ್ಪುತ್ತಿದ್ದಾರೆ. ಕಾಂಗ್ರೆಸ್‌ನ ಸಮಾವೇಶ ನಡೆದಾಗಲೇ ಬಾಣಂತಿಯರು ಮೃತಪಟ್ಟಿದ್ದರೂ ಅಲ್ಲಿಗೆ ಹಿರಿಯ ನಾಯಕರು ಭೇಟಿ ನೀಡಿಲ್ಲ ಎಂದು ದೂರಿದರು.