ಬೆಂಗಳೂರು: ದಕ್ಷಿಣ ಭಾರತದ ಮೊದಲ ಸಾಂಕ್ರಾಮಿಕ ರೋಗ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯ ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರು ಶುಕ್ರವಾರ ಹೇಳಿದ್ದಾರೆ.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಸಾಂಕ್ರಾಮಿಕ ರೋಗ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯ(ಐಆರ್‌ಡಿಎಲ್) ಸ್ಥಾಪಿಸಲು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯನ್ನು(ಬಿಎಂಸಿ ಮತ್ತು ಆರ್‌ಐ) ಅನ್ನು ಆಯ್ಕೆ ಮಾಡಿದೆ ಎಂದು ಪಾಟೀಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಈ ರೀತಿಯ ಪ್ರಯೋಗಾಲಯವನ್ನು ಬೆಂಗಳೂರಿನಲ್ಲಿ ಆರಂಭಿಸಲಾಗುತ್ತಿದ್ದು, ಇದರಿಂದ ರಾಜ್ಯದಲ್ಲಿ ಸಂಶೋಧನಾ ಕ್ಷೇತ್ರಕ್ಕೆ ನೆರವಾಗಲಿದೆ ಎಂದು ಸಚಿವರು ಹೇಳಿದ್ದಾರೆ.
ಸಾಂಕ್ರಾಮಿಕ ರೋಗಗಳ ಕುರಿತಾದ ಸಂಶೋಧನೆಯು ಇನ್ನುಮುಂದೆ ಬೆಂಗಳೂರಿನ ಪ್ರಯೋಗಾಲಯದಲ್ಲಿ ನಡೆಯುತ್ತದೆ ಮತ್ತು ದೃಢೀಕರಣಕ್ಕಾಗಿ ಇತರ ರಾಜ್ಯಗಳಿಗೆ ಮಾದರಿಗಳನ್ನು ಕಳುಹಿಸುವ ಅಗತ್ಯವಿಲ್ಲ ಎಂದು ಅವರು ಹೇಳಿದರು.
ಬ್ಯಾಕ್ಟೀರಿಯಾಲಜಿ, ಮೈಕಾಲಜಿ ಮತ್ತು ಪ್ಯಾರಾಸಿಟಾಲಜಿಗೆ ಸಂಬಂಧಿಸಿದ ವೈರಾಲಜಿ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಗಳನ್ನು(ವಿಆರ್‌ಡಿಎಲ್) ವಿವಿಧ ರಾಜ್ಯಗಳ ವೈದ್ಯಕೀಯ ಕಾಲೇಜುಗಳಲ್ಲಿ ಸ್ಥಾಪಿಸಲು ಮುಂದಾಗಿದೆ ಎಂದು ಪ್ರಕಟಣೆ ತಿಳಿಸಿದೆ.