ಬೀದರ್ ಎಟಿಎಂ ದರೋಡೆ ಪ್ರಕರಣದ ಬೆನ್ನಲ್ಲೆ, ಮಂಗಳೂರಿನಲ್ಲಿ ಅಂಥಹದ್ದೇ ಮತ್ತೊಂದು ದರೋಡೆ ಪ್ರಕರಣ ವರದಿಯಾಗಿದೆ. ಮಂಗಳೂರಿನಲ್ಲಿ ದುಷ್ಕರ್ಮಿಗಳು ಬರೊಬ್ಬರಿ 12 ಕೋಟಿ ರೂ ಮೌಲ್ಯದ ನಗದ ಹಾಗೂ ಚಿನ್ನಾಭರಣ ಹೊತ್ತು ಪರಾರಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆ.ಸಿ.ರೋಡಿನಲ್ಲಿ ಶುಕ್ರವಾರ ಮಧ್ಯಾಹ್ನ ಹಾಡಹಗಲೇ ಬ್ಯಾಂಕ್ ಗೆ ನುಗ್ಗಿದ ಖದೀಮರ ಗುಂಪು ಸುಮಾರು 12 ಕೋಟಿ ರೂ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದ್ದಾರೆ. ಆರು ಜನರಿದ್ದ ದರೋಡೆಕೋರರ ತಂಡವು ಕೋಟೆಕಾರ್ ಬ್ಯಾಂಕ್ ಶಾಖೆಗೆ ನುಗ್ಗಿ, ಪಿಸ್ತೂಲು ಮತ್ತು ತಲವಾರು ತೋರಿಸಿ ಲೂಟಿ ಮಾಡಿದ್ದಾರೆ. ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಕಾರಣ ಹೆಚ್ಚಿನ ಪೊಲೀಸರು ಅದರ ಭದ್ರತೆಗೆ ತೆರಳಿದ್ದರು. ಇದನ್ನೇ ಟಾರ್ಗೆಟ್ ಮಾಡಿಕೊಂಡು ದರೋಡೆಗೆ ಸಂಚು ರೂಪಿಸಿದ್ದ ಶಂಕೆ ವ್ಯಕ್ತವಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಅಮೆರಿಕಾ ದೂತಾವಾಸ ಕಚೇರಿ ಉದ್ಘಾಟನೆಯಾಗಿದ್ದು, ಕರ್ನಾಟಕ ಜನತೆ ಇನ್ನು ಮುಂದೆ ಅಮೆರಿಕಾ ವೀಸಕ್ಕಾಗಿ ಬೇರೆ ರಾಜ್ಯಗಳಿಗೆ ಹೋಗುವುದು ತಪ್ಪಲಿದೆ. ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಎಂಬಿ ಪಾಟೀಲ್, ಸಚಿವ ಪ್ರಿಯಾಂಕ್ ಖರ್ಗೆ, ಸಂಸದ ತೇಜಸ್ವಿ ಸೂರ್ಯ, ಸಂಸದ ಡಾ ಮಂಜುನಾಥ್ ಮತ್ತು ಅಮೆರಿಕಾ ರಾಯಭಾರಿ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈಗಾಗಲೇ 12 ದೂತಾವಾಸ ಕಚೇರಿ ಬೆಂಗಳೂರಲ್ಲಿವೆ. ಇನ್ನಷ್ಟು ದೇಶಗಳು ಇಲ್ಲಿ ದೂತವಾಸ ಕಚೇರಿ ತೆರೆಯಬೇಕೆಂದು ನಮ್ಮ ಬಯಕೆ ಇದೆ. ಬೆಂಗಳೂರಿನ ದೂತವಾಸ ಕಚೇರಿಯಲ್ಲಿ ಶೀಘ್ರದಲ್ಲೇ ವೀಸಾ ಸೇವೆ ಆರಂಭವಾಗಲಿದೆ. ನಾವು ಶೀಘ್ರದಲ್ಲೇ ಲಾಸ್ ಏಂಜಲೀಸ್‌ನಲ್ಲಿ ಭಾರತೀಯ ರಾಜತಾಂತ್ರಿಕ ಕಚೇರಿಯನ್ನು ಆರಂಭಿಸುತ್ತೇವೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಬೆಂಗಳೂರಿನ ಅಮೆರಿಕ ರಾಯಭಾರ ಕಚೇರಿ ಮೊದಲಿಗೆ ವೀಸಾ ಸೇವೆಗಳನ್ನು ನೀಡುವುದಿಲ್ಲ. ಇನ್ನು ಮುಂದಿನ ದಿನಗಳಲ್ಲಿ ವೀಸಾ ಸೇವೆ ಆರಂಬಿಸಲಾಗುವುದು ಎಂದು ಅಮೇರಿಕಾದ ಎರಿಕ್ ಗಾರ್ಸೆಟ್ಟಿ ಹೇಳಿದ್ದಾರೆ. ಈಮಧ್ಯೆ, ಇನ್ನು ಬೆಂಗಳೂರು ಮತ್ತು ದೇಶದ ಇತರ ಆರು ವಿಮಾನ ನಿಲ್ದಾಣಗಳಿಂದ ನಿರ್ಗಮಿಸುವ ಭಾರತೀಯರು ಮತ್ತು ಸಾಗರೋತ್ತರ ಭಾರತೀಯ ಕಾರ್ಡ್ ಹೊಂದಿರುವವರಿಗೆ ಅಂತಾರಾಷ್ಟ್ರೀಯ ಪ್ರಯಾಣವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಫಾಸ್ಟ್ ಟ್ರ್ಯಾಕ್ ಇಮಿಗ್ರೇಷನ್ ಸೌಲಭ್ಯಕ್ಕೆ ಚಾಲನೆ ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವೂ ಇಲ್ಲ, ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ನೋಟಿಸೂ ನೀಡಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್ ಸುರ್ಜೇವಾಲಾ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಗೆ ಆಗಮಿಸಿದಾಗ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಶಿಸ್ತು ಉಲ್ಲಂಘಿಸಿರುವುದಕ್ಕೆ ಸಚಿವ ಸತೀಶ್ ಜಾರಕಿಹೊಳಿಗೆ ನೋಟಿಸ್ ಜಾರಿ ಮಾಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಯಾರು ಈ ರೀತಿ ವದಂತಿಗಳನ್ನು ಹಬ್ಬಿಸುತ್ತಿದ್ದಾರೋ ಗೊತ್ತಿಲ್ಲ ಎಂದರು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುತ್ತಿದ್ದರೆ ಡಿ.ಕೆ ಶಿವಕುಮಾರ್ ಇಲ್ಲೇಕೆ ಬರುತ್ತಿದ್ದರು ಎಂದು ಮರುಪ್ರಶ್ನಿಸಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಪರಿಷತ್ ಸದಸ್ಯ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ವಿಡಿಯೋದಲ್ಲಿ ದೃಢವಾಗಿದೆ ಎಂದು ಸಿಐಡಿಯ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ. ಸಿಟಿ ರವಿ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢವಾಗಿದೆ ಎಂದು ತಿಳಿದುಬಂದಿದೆ. ನಾಲ್ಕು ಗಂಟೆಯ ವಿಡಿಯೋ ರೆಕಾರ್ಡ್ನಲ್ಲಿ ಒಟ್ಟು ಏಳು ಬಾರಿ ಅವಾಚ್ಯ ಶಬ್ದ ಬಳಕೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದಬಂದಿದೆ, ಅವಾಚ್ಯ ಶಬ್ದ ಬಳಸಿದ ಧ್ವನಿ ಪತ್ತೆಗೆ ಸಿಟಿ ರವಿ ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿದೆ. ನ್ಯಾಯಾಲಯದ ಮೂಲಕ ವಿಚಾರಣೆಗೆ ಮತ್ತು ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿದೆ.
2023ರ ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ಇಂದು ತಡೆ ನೀಡಿದೆ. ಮಾನನಷ್ಟ ಮೊಕದ್ದಮೆಯ ಕಾನೂನುಬದ್ಧತೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕ್ರಿಯೆಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ ಮತ್ತು ಬಿಜೆಪಿಗೆ ತುರ್ತು ನೋಟಿಸ್ ಜಾರಿಗೊಳಿಸಿದ್ದಾರೆ.