ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ದರೋಡೆಕೋರರು, ಅತ್ಯಾಚಾರಿಗಳ ತಾಣವಾಗುತ್ತಿದೆ ರಾಜ್ಯ; ಸ್ತ್ರೀ ಕುಲಕ್ಕೆ ಇಲ್ಲ ರಕ್ಷಣೆ: ಬಿ.ವೈ ವಿಜಯೇಂದ್ರ

ಕೇವಲ ಕಾಂಗ್ರೆಸ್ ಸರ್ಕಾರದಲ್ಲೀಗ ನಡೆಯುತ್ತಿರುವುದು ಗುಂಪುಗಾರಿಕೆಯ ರಾಜಕಾರಣ ಹಾಗೂ ಕಾಂಗ್ರೆಸ್ ಉತ್ಸವಗಳು ಮಾತ್ರ, ಜನಹಿತ ಹಾಗೂ ಸಮಾಜ ಸುರಕ್ಷತೆಯನ್ನು ಮರೆತಿರುವ ಈ ಸರ್ಕಾರದ ವ್ಯವಸ್ಥೆಯಲ್ಲಿ ನಾಗರೀಕರು ಅಸುರಕ್ಷತೆಯ ವಾತಾವರಣ ಎದುರಿಸುತ್ತಿದ್ದಾರೆ.

ಬಿ ವೈ ವಿಜಯೇಂದ್ರ
Shilpa D
Updated On : 21 Jan 2025, 3:52 pm

ಬೆಂಗಳೂರು: ಸಂಸ್ಕೃತಿ, ಸಂಸ್ಕಾರ, ಸುರಕ್ಷತೆ ಎಂದರೆ ಕರ್ನಾಟಕ ಎಂಬ ಖ್ಯಾತಿ ಪಡೆದಿದ್ದ ನಮ್ಮ ರಾಜ್ಯ ದರೋಡೆಕೋರರು ಹಾಗೂ ಅತ್ಯಾಚಾರಿಗಳ ತಾಣ ಎಂಬ ಕುಖ್ಯಾತಿಗೆ ಒಳಗಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ರಾಜಧಾನಿ ಬೆಂಗಳೂರಿನ ಕೆ.ಆರ್.ಮಾರುಕಟ್ಟೆ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ಒಬ್ಬಂಟಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ದರೋಡೆ ನಡೆದಿರುವ ವರದಿ ಅತ್ಯಂತ ಹೇಯ ಹಾಗೂ ಅಮಾನವೀಯ ಘಟನೆಯಾಗಿದ್ದು ಸ್ತ್ರೀ ಕುಲಕ್ಕೆ ರಕ್ಷಣೆ ನೀಡಲು ಸಾಧ್ಯವಾಗದ ಪರಿಸ್ಥಿತಿಗೆ ರಾಜ್ಯದ ಕಾನೂನು ಸುವ್ಯವಸ್ಥೆ ಬಂದು ತಲುಪಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕೇವಲ ಕಾಂಗ್ರೆಸ್ ಸರ್ಕಾರದಲ್ಲೀಗ ನಡೆಯುತ್ತಿರುವುದು ಗುಂಪುಗಾರಿಕೆಯ ರಾಜಕಾರಣ ಹಾಗೂ ಕಾಂಗ್ರೆಸ್ ಉತ್ಸವಗಳು ಮಾತ್ರ, ಜನಹಿತ ಹಾಗೂ ಸಮಾಜ ಸುರಕ್ಷತೆಯನ್ನು ಮರೆತಿರುವ ಈ ಸರ್ಕಾರದ ವ್ಯವಸ್ಥೆಯಲ್ಲಿ ನಾಗರೀಕರು ಅಸುರಕ್ಷತೆಯ ವಾತಾವರಣ ಎದುರಿಸುತ್ತಿದ್ದಾರೆ. ಈ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಇದೆಯೇ? ಗೃಹ ಇಲಾಖೆ ಇದೆಯೇ? ಒಂದು ಸರ್ಕಾರ ಈ ರಾಜ್ಯವನ್ನು ಆಳುತ್ತಿದೆಯೇ? ಎಂಬ ಪ್ರಶ್ನೆ ಜನಸಾಮಾನ್ಯರಿಂದ ಕೇಳಿ ಬರುತ್ತಿದೆ ಎಂದು ಹೇಳಿದ್ದಾರೆ.

Advertisement

Advertisement

ಒಂದು ಕಡೆ ಅಭಿವೃದ್ಧಿಯೂ ಇಲ್ಲ, ಮತ್ತೊಂದು ಕಡೆ ಆಡಳಿತ ನಿರ್ವಹಣೆಯಲ್ಲಿಯೂ ಸಂಪೂರ್ಣ ವಿಫಲ, ಕನಿಷ್ಠ ಕಾನೂನು ಸುರಕ್ಷಣೆಯನ್ನಾದರೂ ಒದಗಿಸಲಾಗದ ಈ ಸರ್ಕಾರ ಯಾವ ಮುಖ ಹೊತ್ತುಕೊಂಡು ಅಧಿಕಾರದಲ್ಲಿದೆ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಅತ್ಯಾಚಾರಿ ದುರುಳರನ್ನು ಪತ್ತೆ ಹಚ್ಚಿ ಕಠಿಣ ಕ್ರಮಕ್ಕೆ ಒಳಪಡಿಸಲಿ ಎಂದು ಆಗ್ರಹಿಸಿದ್ದಾರೆ.

Also Read

ಬೆಳಗಾವಿ: ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾರ; ದೂರು ನೀಡಿದ 24 ಗಂಟೆಯಲ್ಲಿ ಮೂವರು ಆರೋಪಿಗಳ ಬಂಧನ

ಸರಣಿ ರೂಪದಲ್ಲಿ ನಡೆಯುತ್ತಿರುವ ಕೊಲೆ, ದರೋಡೆ ಪ್ರಕರಣಗಳು, ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದ್ದು, ರಾಜ್ಯದಲ್ಲಿ ಅರಾಜಕತೆ ಪರಿಸ್ಥಿತಿ ಉಂಟಾಗಿರುವುದನ್ನು ಸಾಕ್ಷೀಕರಿಸುತ್ತಿದೆ. ಇಂತಹ ಘಟನೆಗಳು ಮರುಕಳಿಸುತ್ತಿದ್ದರೆ ಈ ಸರ್ಕಾರಕ್ಕೆ ಜನರೇ ತಕ್ಕಪಾಠ ಕಲಿಸುವ ಪರಿಸ್ಥಿತಿ ಉದ್ಭವಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಬಿಜೆಪಿ ಈ ನಿಟ್ಟಿನಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆಯ ಭದ್ರತೆಗಾಗಿ ಹೋರಾಡಲಿದೆ ಎಂದು ವಿಜಯೇಂದ್ರ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments