ಬೆಳಗಾವಿ: ಬೆಳಗಾವಿ ಜಿಲ್ಲೆಯ ಹೊಸೂರು ಗ್ರಾಮದ ಬಳಿ ಗುರುವಾರ ನರೇಗಾ ಕಾರ್ಮಿಕರು ಪ್ರಯಾಣಿಸುತ್ತಿದ್ದ ಗೂಡ್ಸ್ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಅಪಘಾತದಲ್ಲಿ 42 ವರ್ಷದ ಬೈಕ್ ಸವಾರ ಸಾವನ್ನಪ್ಪಿದ್ದಾರೆ ಮತ್ತು 25 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ದಾವಣಗೆರೆ ಜಿಲ್ಲೆಯ ಅವರಗೊಳ್ಳ ಗ್ರಾಮದ ನಿವಾಸಿ ಅಡಿವೆಪ್ಪ ಬಸವಣ್ಣಿ ಅಂಕಲಿ ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, 45 ನರೇಗಾ ಕಾರ್ಮಿಕರು ಕೆಲಸಕ್ಕಾಗಿ ಯಮಕಮಮರಡಿಯಿಂದ ಹಿಡಕಲ್ ಅಣೆಕಟ್ಟಿಗೆ ಗೂಡ್ಸ್ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ, ಬೈಕ್ ಇದ್ದಕ್ಕಿದ್ದಂತೆ ಅಡ್ಡ ಬಂದಿದೆ.
ಬೈಕ್ ಗೆ ಡಿಕ್ಕಿ ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ಕಳೆದುಕೊಂಡ ಗೂಡ್ಸ್ ವಾಹನ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೊಸೂರು ಗ್ರಾಮದಿಂದ ಬರುತ್ತಿದ್ದ ಬೈಕ್ ಸವಾರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಒಟ್ಟು 25 ಮಂದಿ ಗಾಯಗೊಂಡಿದ್ದು, ಅವರಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಮೂರು ವಿಭಿನ್ನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.