ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಒಳ ಮೀಸಲಾತಿ ಅಸ್ತ್ರ ಪ್ರಯೋಗಿಸಲು ಬಿಜೆಪಿ ಮುಂದಾಗಿದ್ದು, ಆಗಸ್ಟ್ 1 ರಿಂದ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು, ಜುಲೈ ಅಂತ್ಯದೊಳಗೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೆ ತರಲು ವಿಫಲವಾಗಿದ್ದೇ ಆದರೆ, ಆಗಸ್ಟ್ 1 ರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಒಳ ಮೀಸಲಾತಿಯನ್ನು ಈಗಾಗಲೇ ಅನೇಕ ರಾಜ್ಯಗಳು ಜಾರಿಗೆ ತಂದಿವೆ. ಆದರೆ, ರಾಜ್ಯ ಸರ್ಕಾರ ಮಾತ್ರ ಪ್ರಕ್ರಿಯೆಯನ್ನು ವಿಳಂಬ ಮಾಡುತ್ತಿದೆ. ಈ ಮೂಲಕ ಅನುಷ್ಠಾನದ ವಿರುದ್ಧ ಪಿತೂರಿ ನಡೆಸುತ್ತಿರುವ ಕುರಿತು ಅನುಮಾನಗಳು ಮೂಡತೊಡಗಿವೆ ಎಂದು ತಿಳಿಸಿದರು.
ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರವು ಒಳ ಮೀಸಲಾತಿ ಕುರಿತು ನೀತಿಯನ್ನು ರೂಪಿಸಲು ಆಗಿನ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು. ಇದೀಗ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಸರ್ಕಾರ ಒಳಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಆಂಧ್ರಪ್ರದೇಶ, ತೆಲಂಗಾಣ ಮತ್ತು ಹರಿಯಾಣ ಒಳ ಮೀಸಲಾತಿಯನ್ನು ಜಾರಿಗೆ ತಂದಿವೆ. ಆದರೆ, ರಾಮಯ್ಯ ಸರ್ಕಾರ ಅದನ್ನು ಜಾರಿಗೆ ತರುವ ಬದಲು ಮತ ಬ್ಯಾಂಕ್ ರಾಜಕೀಯದಲ್ಲಿ ತೊಡಗಿದೆ. ಜನರಲ್ಲಿ ಗೊಂದಲ ಸೃಷ್ಟಿಸಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯನ್ನು ರಚಿಸಲಾಗಿದೆ ಎಂದು ಆರೋಪಿಸಿದರು.
ಕೇಂದ್ರದ ಮಾಡಿ ಸಚಿವ ಎ. ನಾರಾಯಣಸ್ವಾಮಿ ಅವರು ಮಾತನಾಡಿ, ಜಾತಿ ಸಮೀಕ್ಷೆಯನ್ನು ಸರಿಯಾಗಿ ಮಾಡಲಾಗಿಲ್ಲ. ಸಮೀಕ್ಷೆ ನಡೆಸದಿದ್ದರೂ ಸಮೀಕ್ಷೆಯಾಗಿದೆ ಎಂದು ಹೇಳಿ ಗಣತಿದಾರರು ಮನೆಗಳ ಹೊರಗೆ ಸ್ಟಿಕ್ಕರ್‌ಗಳನ್ನು ಅಂಟಿಸುತ್ತಿದ್ದಾರೆಂದು ಆರೋಪಿಸಿದರು.