ಬೆಂಗಳೂರು: ದೇವನಹಳ್ಳಿ ಬಳಿಯ ಚನ್ನರಾಯಪಟ್ಟಣ ಹೋಬಳಿಯ ಕೃಷಿ ಭೂಮಿ ಭೂಸ್ವಾಧೀನ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಹೋರಾಟಗಾರರು, ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಿದರು.
ಸಚಿವರಾದ ಕೆ.ಹೆಚ್.ಮುನಿಯಪ್ಪ, ಬೈರತಿ ಸುರೇಶ್, ಶಾಸಕ ಬಿ.ಆರ್.ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ನಟ ಪ್ರಕಾಶ್ ರಾಜ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ಮತ್ತೆ ರೈತರ ಸಭೆ ಕರೆಯಲಾಗುವುದು.
ಈ ಸಂಬಂಧ ಕಾನೂನು ಸಮಸ್ಯೆ ನಿವಾರಿಸಲು ಸರ್ಕಾರಕ್ಕೆ ಹತ್ತು ದಿನಗಳ ಕಾಲಾವಾಕಾಶ ಬೇಕಿದೆ. ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಜುಲೈ 15 ರಂದು ರೈತ ಹೋರಾಟಗಾರರೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವುದಕ್ಕೆ ಸಂಬಂಧಿಸಿದಂತೆ ಕೆಲವು ಕಾನೂನು ತೊಡಕುಗಳಿದ್ದು, ಅದನ್ನು ಸರಿಪಡಿಸಿಕೊಳ್ಳುವ ಸಲಹೆಯನ್ನು ಕಾನೂನು ತಜ್ಞರು ನೀಡಿದ್ದಾರೆ.
ಈಗಾಗಲೇ ಎಪ್ರಿಲ್ ತಿಂಗಳಲ್ಲಿ ಅಂತಿಮ ನೋಟಿಫಿಕೇಶನ್ ಅಗಿರುವ ಕಾರಣ ಅದರ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ 10 ದಿನಗಳ ಕಾಲಾವಕಾಶ ಅಗತ್ಯವಿದೆ. ಈ ಕಾಲಾವಧಿಯಲ್ಲಿ ಸರ್ಕಾರಕ್ಕೆ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಿದೆ ಎಂದರು.
ಕಾನೂನು - ಕಾಯ್ದೆಗೆ ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ. ನಿಯಮಾನುಸಾರ ಅಂತಿಮ ನೋಟಿಫಿಕೇಶ್ ಆಗಿರುವ ಕಾರಣ, ಅದರ ಕಾನೂನು ಅಂಶಗಳನ್ನು ಪರಿಶೀಲಿಸುವ ಅಗತ್ಯವಿದೆ. ಈ ಕುರಿತು ನಿನ್ನೆ ಪೂರ್ವಭಾವಿ ಸಭೆ ನಡೆಸಿದ್ದೇವೆ. ಇಂದೇ ಸರ್ಕಾರದ ನಿಲುವು ಪ್ರಕಟಿಸಲು ಸಾಧ್ಯವಿಲ್ಲ. 10 ದಿನಗಳ ಬಳಿಕ ಮತ್ತೆ ಸಭೆ ನಡೆಸಿ ಸರ್ಕಾರದ ನಿಲುವು ಸ್ಪಷ್ಟಪಡಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ನಾವು ಪ್ರಜಾಪ್ರಭುತ್ವ ಮತ್ತು ಸಂವಾದದಲ್ಲಿ ನಂಬಿಕೆಯಿಟ್ಟಿರುವವರು. ಪ್ರತಿಭಟನೆಗೆ ಯಾವುದೇ ಅಡ್ಡಿಪಡಿಸಿಲ್ಲ. ನಾನೂ ರೈತ ಸಂಘದಲ್ಲಿದ್ದವನು, ನಮ್ಮ ವಿರುದ್ಧ ಪ್ರತಿಭಟಿಸಿದರೂ ಅದನ್ನು ಹತ್ತಿಕ್ಕುವ ಕೆಲಸ ನಾವು ಮಾಡಿಲ್ಲ ಎಂದು ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.