ಬೆಂಗಳೂರು: 'ಅಕ್ರಮ ಗಣಿಗಾರಿಕೆ' ಪ್ರಕರಣಗಳಿಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿ ಹಲವು ವಿಷಯಗಳ ಕುರಿತು ಪರಿಶೀಲಿಸಲು ಮತ್ತು ಸೂಕ್ತ ಕ್ರಮಗಳನ್ನು ಶಿಫಾರಸು ಮಾಡಲು ರಾಜ್ಯ ಸರ್ಕಾರ ಶನಿವಾರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ನೇತೃತ್ವದಲ್ಲಿ ಆರು ಸದಸ್ಯರ ಸಂಪುಟ ಉಪಸಮಿತಿ ರಚಿಸಿದೆ.
ಒಂದು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸಲು ಸಂಪುಟ ಉಪಸಮಿತಿಗೆ ಸೂಚಿಸಲಾಗಿದೆ.
ಗೃಹ ಸಚಿವ ಜಿ ಪರಮೇಶ್ವರ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ, ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹಾದೇವಪ್ಪ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರು ಸಂಪುಟ ಉಪಸಮಿತಿಯ ಸದಸ್ಯರಾಗಿದ್ದಾರೆ.
ಜುಲೈ 2 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಉಪಸಮಿತಿ ರಚಿಸಲು ನಿರ್ಧರಿಸಲಾಗಿತ್ತು.
"ಗಣಿಗಾರಿಕೆಯಲ್ಲಿನ ಅಕ್ರಮಗಳ ಬಗ್ಗೆ, ವಿಶೇಷವಾಗಿ ರಿಕವರಿ ಆಯುಕ್ತರ ನೇಮಕ ಮತ್ತು ಪ್ರಕರಣಗಳ ತ್ವರಿತ ವಿಲೇವಾರಿಗಾಗಿ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯ ಸ್ಥಾಪಿಸುವ ಬಗ್ಗೆ ಚರ್ಚಿಸಲು ಮತ್ತು ಸೂಕ್ತ ಶಿಫಾರಸುಗಳನ್ನು ಮಾಡಲು ಸಂಪುಟ ಉಪಸಮಿತಿ ರಚಿಸಲಾಗಿದೆ" ಎಂದು ಅಧಿಕೃತ ಟಿಪ್ಪಣಿಯಲ್ಲಿ ತಿಳಿಸಲಾಗಿದೆ.
ಅಕ್ರಮ ಗಣಿಗಾರಿಕೆ ಪ್ರಕರಣಗಳನ್ನು "ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವಲ್ಲಿ ಸರ್ಕಾರ ವಿಫಲವಾಗಿದೆ" ಎಂದು ಎಚ್ ಕೆ ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಅಲ್ಲದೆ ಎಚ್ ಕೆ ಪಾಟೀಲ್ ಅವರು ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು ಮತ್ತು ರಾಜ್ಯದ ಕಳೆದುಹೋದ ಸಂಪತ್ತನ್ನು ಮರಳಿ ಪಡೆಯುವುದು ಸೇರಿದಂತೆ ಹಲವು ಕಳವಳಗಳನ್ನು ವ್ಯಕ್ತಪಡಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.