ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಕುರಿತು ತನ್ನ ಅನುಮತಿಯಿಲ್ಲದೆ ಅಂತಿಮ ವರದಿಯನ್ನು ಸಲ್ಲಿಸದಂತೆ ನಗರ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದೆ.
ಎಫ್‌ಐಆರ್‌ನ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಆರ್‌ಸಿಬಿ ಮತ್ತು ಡಿಎನ್‌ಎ ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ಆರ್ ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಏತನ್ಮಧ್ಯೆ, ಸರ್ಕಾರ ತನಿಖೆ ಮುಂದುವರಿಸಬಹುದು. ನಮ್ಮ ಕಕ್ಷೀದಾರರು ತನಿಖೆಗೆ ಸಹಕರಿಸುತ್ತಿದ್ದಾರೆ. ಇದರ ನಡುವೆ ಆರೋಪಪಟ್ಟಿ ಸಲ್ಲಿಸಿದರೆ ಅವರಿಗೆ ಉಂಟಾದ ಹಾನಿಯನ್ನು ಸರಿಪಡಿಸಲಾಗದು. ಹೀಗಾಗಿ, ಸಕ್ಷಮ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸದಂತೆ ಆದೇಶಿಸಬೇಕು ಎಂದು ವಾದಿಸಿದರು. ಡಿಎನ್‌ಎ ಪರ ವಕೀಲರು ತಮ್ಮ ವ್ಯವಹಾರದ ಮೇಲೆ ಪರಿಣಾಮ ಬೀರಿದೆ ಎಂದು ವಾದಿಸಿದರು.
ಈ ವೇಳೆ ಪೀಠವು ಹಾಲಿ ಅರ್ಜಿಗಳನ್ನು ವಿಸ್ತೃತವಾಗಿ ಆಲಿಸಬೇಕಿದೆ. ಸಕ್ಷಮ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿರುವುದರಿಂದ ಈ ಪ್ರಕರಣಗಳ ಮೇಲೆ ಪರಿಣಾಮ ಉಂಟು ಮಾಡುವ ಸಾಧ್ಯತೆ ಇರುವುದರಿಂದ ನ್ಯಾಯಾಲಯದ ಅನುಮತಿ ಪಡೆಯದೇ ಸಕ್ಷಮ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಬಾರದು ಎಂದು ಆದೇಶಿಸಿ, ವಿಚಾರಣೆಯನ್ನು ಆಗಸ್ಟ್ 5ಕ್ಕೆ ಮುಂದೂಡಿತು.
ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿರುವ ಸ್ಥಿತಿಗತಿ ವರದಿಯನ್ನು 4 ದಿನಗಳಲ್ಲಿ ಬಹಿರಂಗಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತು.
4 ದಿನಗಳಲ್ಲಿ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಸ್ಥಿತಿಗತಿ ವರದಿಯನ್ನು ಸಾರ್ವಜನಿಕಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಜುಲೈ 16ಕ್ಕೆ ಮುಂದೂಡಿತು.