ಕಾರವಾರ: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ ಮುಂವರೆದ ಪರಿಣಾಮ ಕೊಡಗು, ಉತ್ತರ ಕನ್ನಡದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಳೆ ಅಬ್ಬರ ಜೋರಾಗಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷೀಪ್ರಿಯಾ ರಜೆ ಘೋಷಣೆ ಮಾಡಿದ್ದಾರೆ.
ವ್ಯಾಪಕ ಮಳೆ
ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 3 ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾರೀ ಮಳೆ ಹಿನ್ನೆಲೆ ಕರಾವಳಿ, ಒಳನಾಡು ಸೇರಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದೆ.
ಮಡಿಕೇರಿ ತಾಲ್ಲೂಕಿನಲ್ಲಿ ಗಾಳಿ ಸಹಿತ ಅಧಿಕ ಮಳೆಯಾಗುತ್ತಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡದಲ್ಲೂ ಮಳೆ ಅಬ್ಬರಿಸಿದ್ದು ನದಿ ನೀರಿನ ಮಟ್ಟ ಏರಿಕೆಯಾಗಿದೆ. ಮಡಿಕೇರಿಯಲ್ಲಿ ನಿರಂತರ ಗಾಳಿಮಳೆಯಾಗುತ್ತಿದ್ದು, ಮೈಕೊರೆಯುವ ಚಳಿ ಮತ್ತು ಮಂಜು ಮುಸುಕಿದ ವಾತಾವರಣದಿಂದ ಜನ ಹಾಗೂ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ನಡುವೆ ಜಿಲ್ಲಾಧಿಕಾರಿ ವೆಂಕಟರಾಜ ಅವರು ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಜುಲೈ 22ರವರೆಗೂ ಮಳೆ ಸಾಧ್ಯತೆ
ಇನ್ನು ಗುರುವಾರ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹಳದಿ ಎಚ್ಚರಿಕೆ ನೀಡಿದೆ. ಇದಲ್ಲದೆ, ಕರ್ನಾಟಕದ ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಧಾರವಾಡ, ಗದಗ, ಕೊಪ್ಪಳ, ಬೆಳಗಾವಿ, ವಿಜಯಪುರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಹಳದಿ ಎಚ್ಚರಿಕೆ ನೀಡಿದೆ.
ಅಂತೆಯೇ ಜುಲೈ 22 ರವರೆಗೆ ರಾಜ್ಯಾದ್ಯಂತ ಮಳೆ ಮುಂದುವರಿಯುವ ಸಾಧ್ಯತೆಯಿದೆ.