ಬೆಂಗಳೂರು: ನಗರದಲ್ಲಿ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂದೆ ಅಧಿಕಾರಿಗಳಿಗ ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರು ಗುರುವಾರ ಸೂಚನೆ ನೀಡಿದ್ದಾರೆ.
ಗುರುವಾರ ನಗರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆನೀರಿನ ಚರಂಡಿ ಅಭಿವೃದ್ಧಿ, ಮೇಲ್ಸೇತುವೆ, ವೈಟ್ ಟಾಪಿಂಗ್, ಬ್ಲ್ಯಾಕ್ ಟಾಪಿಂಗ್, ಹೈ-ಡೆನ್ಸಿಟಿ ಕಾರಿಡಾರ್‌ಗಳು, ಕೆರೆಗಳು ಸೇರಿದಂತೆ ಹಲವಾರು ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ಯೋಜನೆಗಳಿಗೆ ಸಂಬಂಧಿಸಿದ ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಅವುಗಳನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ತಕ್ಷಣ ಕ್ರಮಗಳ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈಜಿಪುರ, ಯಲಹಂಕ ಪೊಲೀಸ್ ಠಾಣೆ ವೃತ್ತ, ಹೊಸಕೆರೆಹಳ್ಳಿ ಜಂಕ್ಷನ್, ರಾಜರಾಜೇಶ್ವರಿ ನಗರ ಮತ್ತು ಇತರ ಸ್ಥಳಗಳಲ್ಲಿ ಮೇಲ್ಸೇತುವೆ ಕಾಮಗಾರಿಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
901 ಕೋಟಿ ರೂ. ವೆಚ್ಚದಲ್ಲಿ 88 ಕಿ.ಮೀ ಉದ್ದದ ವೈಟ್ ಟಾಪಿಂಗ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ವೈಟ್ ಟಾಪಿಂಗ್ ಕಾಮಗಾರಿಗಳು ಯಾವಾಗ ಪೂರ್ಣಗೊಳ್ಳುತ್ತವೆ ಎಂಬುದರ ಕುರಿತು ವಿವರಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬ್ಲ್ಯಾಕ್ ಟಾಪಿಂಗ್ ಕಾಮಗಾರಿಗಳನ್ನು 28 ಪ್ಯಾಕೇಜ್‌ಗಳಲ್ಲಿ 694 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಎಲ್ಲಾ ಬ್ಲ್ಯಾಕ್ ಟಾಪಿಂಗ್ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ. ವಿಶ್ವಬ್ಯಾಂಕ್ ಅನುದಾನದಡಿಯಲ್ಲಿ ಕೈಗೊಳ್ಳಬೇಕಾದ ಮಳೆನೀರು ಚರಂಡಿ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸುವಂತೆಯೂ ಇದೇ ವೇಳೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಬಿಬಿಎಂಪಿ ವಿಶೇಷ ಆಯುಕ್ತರು ಮತ್ತು ವಲಯ ಆಯುಕ್ತರು ಭಾಗವಹಿಸಿದ್ದರು.