ಬೆಂಗಳೂರು: ಆಗಸ್ಟ್ 11 ರಿಂದ 22ರವರೆಗೆ 9 ದಿನಗಳ ಕಾಲ ರಾಜ್ಯ ಮುಂಗಾರು ಅಧಿವೇಶನ ನಡೆಯಲಿದೆ.
ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದ್ದು, ಆಗಸ್ಟ್ 11 ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನಸಭೆ ಹಾಗೂ ವಿಧಾನಪರಿಷತ್ ನ ಜಂಟಿ ಅಧಿವೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಆರ್ ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ, ಸರ್ಕಾರದ ಹೊಸ ಜಾತಿ ಗಣತಿ ನಿರ್ಧಾರ, ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸಲು ನಡೆಸಿದ ಸಮೀಕ್ಷೆಯಲ್ಲಿನ ವ್ಯತ್ಯಾಸಗಳು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕೋಮು ಹತ್ಯೆಗಳು ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ರಣತಂತ್ರ ರೂಪಿಸುತ್ತಿವೆ.
ಕರ್ನಾಟಕ ರೋಹಿತ್ ವೇಮುಲಾ ಮಸೂದೆ, ಕರ್ನಾಟಕ ತಪ್ಪು ಮಾಹಿತಿ, ಸುಳ್ಳು ಸುದ್ದಿ ನಿಷೇಧ ಮಸೂದೆ, ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ತಡೆ ಮಸೂದೆ ಸೇರಿದಂತೆ ಹಲವು ಮಸೂದೆಗಳು ಅಧಿವೇಶನದಲ್ಲಿ ಮಂಡನೆಯಾಗುವ ನಿರೀಕ್ಷೆಯಿದೆ.
ನಾಯಕತ್ವದ ವಿಚಾರವಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿಯ ನಡುವೆ ವಾಕ್ ಪ್ರಹಾರ ನಡೆಯುತ್ತಿರುವಂತೆಯೇ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದೆ.
ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಹರಿದಾಡುತ್ತಿರುವಂತೆಯೇ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರ ಮುಂದುವರಿಕೆ ಕುರಿತು ಪಕ್ಷದಲ್ಲಿ ಅಸಮಾಧಾನವೂ ಕೇಳಿಬಂದಿದೆ.