ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಮಡಿಕೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ.
ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲ ತಾಲೂಕಿನಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಈಗಾಗಲೇ ಹವಾಮಾನ ಇಲಾಖೆ ಮುಂದಿನ 7 ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದು, ಇದರ ಬೆನ್ನಲ್ಲೇ ಹಲವು ಜಿಲ್ಲೆಗಳಲ್ಲಿ ವರುಣ ಅವಾಂತರ ಕೂಡ ಸೃಷ್ಟಿಸಿದ್ದಾನೆ. ಮಲೆನಾಡು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರಿ ಮಳೆ ಮುನ್ಸೂಚನೆ ಹಿನ್ನಲೆ ಭಾರತೀಯ ಹವಾಮಾನ ಇಲಾಖೆ ಚಿಕ್ಕಮಗಳೂರು ಜಿಲ್ಲೆಯಲ್ಲಿ 5 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಅಂಗನವಾಡಿಯಿಂದ ಪ್ರೌಢ ಶಾಲೆವರೆಗೆ ರಜೆ ಘೋಷಿಸಿ ಬಂಟ್ವಾಳ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಉಳ್ಳಾಲ ತಾಲೂಕು ವ್ಯಾಪ್ತಿಯ ಶಾಲೆಗಳಿಗೂ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.
ಮಂಗಳೂರು ತಾಲೂಕಿನಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನಲೆ ಮಂಗಳೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಜೊತೆಗೆ ನದಿ, ಸಮುದ್ರ ತೀರ ಪ್ರದೇಶಕ್ಕೆ ತೆರಳದಂತೆ ಮೀನುಗಾರರಿಗೆ ಮಂಗಳೂರು ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಕೊಡಗಿಗೆ ರೆಡ್ ಅಲರ್ಟ್
ಕೊಡಗಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಕೊಡಗಿನಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಕೊಡಗು ಮಾತ್ರವಲ್ಲದೇ ಚಿಕ್ಕಮಗಳೂರು ಜಿಲ್ಲೆಯಲ್ಲಿ 5 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಂತೆಯೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು ಜಿಲ್ಲೆಗಳಲ್ಲಿ 40-50ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಪರಿಸ್ಥಿತಿ ಏನು?
ಇತ್ತ ಬೆಂಗಳೂರು ಸೇರಿದಂತೆ ಇನ್ನುಳಿದ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಹಿನ್ನಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನ ಮೋಡ ಕವಿದ ವಾತಾವರಣ ಇದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 30-40 ಕಿ.ಮೀ ನೊಂದಿಗೆ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಟ ಮತ್ತು ಕನಿಷ್ಟ ತಾಪಮಾನ ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.