ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಿ (ಜಿಬಿಎ) ಬದಲಾಯಿಸಿ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಚಲನಚಿತ್ರ ನಿರ್ದೇಶಕ ಟಿ. ಎಸ್.ನಾಗಾಭರಣ ಹೈಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ಸಂಬಂಧ ನ್ಯಾಯಾಲಯ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಸೋಮವಾರ ನೋಟಿಸ್ ಜಾರಿ ಮಾಡಿದೆ.
ನಾಗಾಭರಣ ಅವರು ಹೈಕೋರ್ಟ್‌ಗೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯಡಿ ಬಿಬಿಎಂಪಿ ಯನ್ನು ಜಿಬಿಎಯಾಗಿ ಪರಿವರ್ತಿಸಲಾಗಿದೆ. ಈ ಕಾಯ್ದೆ ಸಂವಿಧಾನ 24ನೇ ತಿದ್ದುಪಡಿಗೆ (ಸ್ಥಳೀಯ ಸಂಸ್ಥೆಗಳಿಗೆ ಸಮಾನ ಸ್ಥಾನಮಾನ ಕಲ್ಪಿಸಿ ಅಧಿಕಾರ ವಿಕೇಂದ್ರಿಕರಣಕ್ಕೆ ಅವಕಾಶ ನೀಡಿರುವುದು) ತದ್ವಿರುದ್ಧವಾಗಿದೆ.
ಆದ್ದರಿಂದ ಕಾಯ್ದೆಯನ್ನು ಅಸಾಂವಿಧಾನಿಕ ಎಂಬುದಾಗಿ ಘೋಷಣೆ ಮಾಡಬೇಕು. ಜಿಬಿಎಯಾಗಿ ಪರಿವರ್ತಿಸಿ ಸರ್ಕಾರ ಹೊರಡಿಸಿದ ಅಧಿಸೂಚನೆ ರದ್ದುಪಡಿಸಬೇಕು. ಮುಂದಿನ 3 ತಿಂಗಳಲ್ಲಿ ಬಿಬಿಎಂ ಪಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದ್ದಾರೆ.
ಸೋಮವಾರ ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ವಿಭು ಬಬ್ರು ಅವರ ನೇತೃತ್ವದ ವಿಭಾಗೀಯ ಪೀಠ, ಪ್ರತಿವಾದಿಯಾಗಿರುವ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.