ಬೆಂಗಳೂರು: ಕರ್ನಾಟಕದಲ್ಲಿ ಮಾನ್ಸೂನ್ ಮಾರುತಗಳು ತೀವ್ರಗೊಂಡ ಪರಿಣಾಮ ರಾಜ್ಯಾದ್ಯಂತ ಭಾರಿ ಮಳೆ ಮುಂದುವರೆದಿದ್ದು, ರಾಜ್ಯದ 7 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆ ಇಂದೂ ಕೂಡ ಮುಂದವರೆಯಲಿದ್ದು, ಇಂದು ಕರ್ನಾಟಕದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿಗೆ.
ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮೈಸೂರು, ಮಂಡ್ಯ, ಚಾಮರಾಜನಗರ, ಯಾದಗಿರಿ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಎಲ್ಲೋ ಅಲರ್ಟ್
ಬೆಂಗಳೂರಿನಲ್ಲಿ ಸೋಮವಾರ ಭಾರಿ ಮಳೆಯಾಗಿತ್ತು. ಮಂಗಳವಾರ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದೆ. ಇಂದೂ ಕೂಡ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ ಮೂರು ದಿನಗಳ ಕಾಲ ಬೆಂಗಳೂರಿನಲ್ಲೂ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ತಾಪಮಾನ ಕುಸಿತವಾಗಿದೆ. ಎಚ್ಎಎಲ್ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ತಿಳಿದುಬಂದಿದೆ.
ರೆಡ್ ಅಲರ್ಟ್, ಜು.24ರವರೆಗೂ ವ್ಯಾಪಕ ಮಳೆ
ಇನ್ನು ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೊಡಗು, ದಕ್ಷಿಣಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 24ರವರೆಗೂ ಭಾರಿ ಮಳೆ(Rain)ಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.