ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನಲ್ಲಿ 32 ವರ್ಷದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಹನ್ನೊಂದಕ್ಕೆ ಏರಿದೆ.
ಅಮ್ಮುಂಜೆ ಗ್ರಾಮದ ನಿವಾಸಿ ಸಾಹಿತ್ ಅಲಿಯಾಸ್ ಶಾಹಿತ್ (24) ಎಂಬಾತನನ್ನು ಸೋಮವಾರ ತಡರಾತ್ರಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
'ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತ್‌ನನ್ನು ಬಂಧಿಸಲಾಗಿದೆ' ಎಂದು ಅವರು ಹೇಳಿದರು.
ಮೇ 27 ರಂದು ಕುರ್ಯಾಲ್ ಗ್ರಾಮದ ಎರಕೋಡಿ ಪ್ರದೇಶದಲ್ಲಿ ರಹಿಮಾನ್ ಮತ್ತು ಅವರ 29 ವರ್ಷದ ಸಹೋದ್ಯೋಗಿ ಕಲಂದರ್ ಶಫಿ ಜಲ್ಲಿಕಲ್ಲು ಇಳಿಸುತ್ತಿದ್ದಾಗ, ಮೋಟಾರ್ ಸೈಕಲ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ. ರಹಿಮಾನ್ ಸ್ಥಳದಲ್ಲೇ ಸಾವಿಗೀಡಾದರೆ, ಶಫಿ ಗಂಭೀರವಾಗಿ ಗಾಯಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಹತ್ಯೆ ಹಿಂದಿನ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.