ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರಕ್ಕೆ ಮುಂದೂಡಿದೆ.
ನಟ ದರ್ಶನ್ ಪರ ಇಂದು ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಲಿಲ್ಲ. ಅವರು ಗೈರಾದ ಕಾರಣ ನಟನ ಪರ ಸಿದ್ಧಾರ್ಥ್ ದವೆ ಹಾಜರಾದರು. ಕಪಿಲ್ ಸಿಬಲ್ ಅವರು ಕೇಸಿನ ಬಗ್ಗೆ ಮಾಹಿತಿ ಕಲೆಹಾಕಲು ಸಮಯ ಬೇಕೆಂದು ಕೇಳಿದ್ದಕ್ಕೆ ಗುರುವಾರಕ್ಕೆ ವಿಚಾರಣೆ ಮುಂದೂಡಿಕೆಯಾಗಿದೆ.
ಕಪಿಲ್ ಸಿಬಲ್ ಗೈರು ಹಿನ್ನೆಲೆ ವಾದ ಮಂಡನೆಗೆ ಕಾಲಾವಕಾಶ ಕೋರಲಾಗಿದೆ. ಲಿಖಿತ ರೂಪದಲ್ಲಿ ದಾಖಲೆ ತಯಾರಿಡಲು ಕೋರ್ಟ್ ಸೂಚನೆ ನೀಡಿದೆ. ಕಳೆದ ಗುರುವಾರ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ನಟ ದರ್ಶನ್ ಮತ್ತು ಇತರೆ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿರುವ ಹೈಕೋರ್ಟ್ ತೀರ್ಪಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು.
ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಪೀಠವು, ಹೈಕೋರ್ಟ್ ತನ್ನ ವಿವೇಚನೆ ಚಲಾಯಿಸಿದ ರೀತಿ ತನಗೆ ಮನದಟ್ಟಾಗಿಲ್ಲ ಎಂದು ಹೇಳಿ ವಿಚಾರಣೆಯನ್ನು ಜು.22ಕ್ಕೆ ಮುಂದೂಡಿತ್ತು.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಎಲ್ಲಾ 17 ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಈ ಪೈಕಿ ಎ1 ಪವಿತ್ರಾ ಗೌಡ, ಎ2 ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡುವಂತೆ ಸರ್ಕಾರ ಕೋರಿದೆ.