ಬೆಂಗಳೂರು: ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ 2024 ಮತ್ತು 2025ರ ಮಧ್ಯದ ನಡುವೆ 981 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪೈಕಿ 825 ರೈತರು ಅರ್ಹ ರೈತರೆಂದು ದೃಢಪಟ್ಟಿದ್ದರೆ, ಉಳಿದ 138 ಮಂದಿ ಇತರ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯ ಸರ್ಕಾರ ಇಲ್ಲಿಯವರೆಗೂ 807 ಕುಟುಂಬಗಳಿಗೆ ಪರಿಹಾರ ನೀಡಿದೆ. 18 ಕೇಸ್ ಗಳಲ್ಲಿ ಪರಿಹಾರ ಇನ್ನೂ ನೀಡಬೇಕಾಗಿದೆ.
ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು 128 ರೈತರು, ಮೈಸೂರಿನಲ್ಲಿ 73, ಧಾರವಾಡದಲ್ಲಿ 72, ಬೆಳಗಾವಿಯಲ್ಲಿ 71 ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ ಬೆಂಗಳೂರು ನಗರ, ಗ್ರಾಮಾಂತರ, ಉಡುಪಿ ಮತ್ತು ಕೋಲಾರ ಜಿಲ್ಲೆಯಲ್ಲಿ ಯಾವುದೇ ರೈತರು ಆತ್ಮಹತ್ಯೆ ಮಾಡಿಕೊಂಡಿಲ್ಲ.
ರೈತರಲ್ಲಿ ಆತ್ಮಹತ್ಯೆ ಪ್ರಕರಣ ಹೆಚ್ಚಾಗುತ್ತಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಕಾಂಗ್ರೆಸ್ ಸರ್ಕಾರವನ್ನು ದೂಷಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ರಾಜ್ಯದ ರೈತರಲ್ಲಿ ಆತಂಕ ಹೆಚ್ಚಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕೃಷಿ ವಲಯದಲ್ಲಿ ಯಾವುದೇ ಸುಧಾರಣೆಯಾಗಿಲ್ಲ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರೈತ ಪರ ಯೋಜನೆಗಳನ್ನು ನಿಲ್ಲಿಸಲಾಗಿದೆ. ಪ್ರಧಾನ ಮಂತ್ರಿ ಕಿಶಾನ್ ಸಮ್ಮಾನ್ ನಿಧಿ ಯೋಜನೆಯಡಿ ಹಿಂದಿನ ಬಿಜೆಪಿ ಸರ್ಕಾರ ಹೆಚ್ಚುವರಿ ರೂ. 4,000 ಆರ್ಥಿಕ ನೆರವು ನೀಡುತ್ತಿದ್ದರಿಂದ ರೂ. 52 ಲಕ್ಷ ರೈತರಿಗೆ ನೆರವಾಗುತಿತ್ತು. ಆದರೆ ಅದನ್ನು ಕಾಂಗ್ರೆಸ್ ಸರ್ಕಾರ ಇದೀಗ ಸ್ಥಗಿತಗೊಳಿಸಿದೆ. ರೈತರ ವಿದ್ಯಾನಿಧಿ ಯೋಜನೆಯನ್ನು ಕೂಡಾ ನಿಲ್ಲಿಸಲಾಗಿದೆ. ಇದರಿಂದ ರೈತರ ಮಕ್ಕಳು ಉನ್ನತ ವ್ಯಾಸಂಗ ಮಾಡಲು ಅನುಕೂಲವಾಗುತಿತ್ತು. ಇದು ರಾಜ್ಯದ ರೈತರನ್ನು ನಿರ್ಲಕ್ಷಿಸಿರುವುದನ್ನು ಸ್ಪಷ್ಪವಾಗಿ ತೋರಿಸುತ್ತದೆ ಎಂದು ಹೇಳಿದ್ದಾರೆ.
ಮತ್ತೊಂದೆಡೆ ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್, ಈ ವಿಚಾರದಲ್ಲಿ ಬಿಜೆಪಿ ಹಾಗೂ ವಿಜಯೇಂದ್ರ ಜನರ ಹಾದಿ ತಪ್ಪಿಸುತ್ತಿದ್ದಾರೆ. ಈ ವಿಚಾರವನ್ನು ರಾಜ್ಯ ಸರ್ಕಾರ ಈಗಾಗಲೇ ಕೇಂದ್ರದ ಗಮನಕ್ಕೆ ತಂದಿದೆ. ಪ್ರಧಾನಿ ಮೋದಿ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡುವುದಾಗಿ ಹೇಳಿದ್ದರು, ಆದರೆ ಈ ಸಂಬಂಧ ಯಾವುದೇ ಬೆಳವಣಿಗೆಯಾಗಿಲ್ಲ. ಡೀಸೆಲ್ ಬೆಲೆ, ಹೆಚ್ಚುವರಿ ತೆರಿಗೆಗಳು ಹೆಚ್ಚಾಗಿವೆ. ರಾಜ್ಯದ ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಸಬ್ಸಿಡಿ ನೀಡುತ್ತಿದೆ. ಕೇಂದ್ರ ಸರ್ಕಾರ ಕೂಡಲೇ ಎಲ್ಲಾ ಹೆಚ್ಚುವರಿ ತೆರಿಗೆಗಳನ್ನು ಸ್ಥಗಿತಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.