ಬೆಳಗಾವಿ: ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಸ್ವಲ್ಪ ಹೆಚ್ಚಿಸಿ, ಅದರಿಂದ ಬಹಂದ ಆದಾಯವನ್ನು ಕಾರ್ಮಿಕರ ಕಲ್ಯಾಣಕ್ಕೆ ಬಳಸಲು ಉದ್ದೇಶಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಮಂಗಳವಾರ ಹೇಳಿದರು.
ಸೋಮವಾರ ಶ್ರಮಿಕರ ತಾತ್ಕಾಲಿಕ ವಸತಿ ಸಮುಚ್ಛಯ ಉದ್ಘಾಟಿಸಿ, ಅಸಂಘಟಿತ ವಲಯದ ಕಾರ್ಮಿಕರಿಗೆ ಸ್ಮಾರ್ಟ್‌ಕಾರ್ಡ್ ವಿತರಿಸಿ ಸಚಿವರು ಮಾತನಾಡಿದರು.
ಅಸಂಘಟಿತ ಕಾರ್ಮಿಕರು ಸಾಮಾಜಿಕ ಮತ್ತು ಆರ್ಥಿಕ ಭದ್ರತೆಯಿಂದ ವಂಚಿತರಾಗಿದ್ದಾರೆ. ಅವರಿಗೆ ಸಂಘಟಿತ ಕಾರ್ಮಿಕ ವರ್ಗಕ್ಕೆ ಸಮಾನವಾದ ಸೌಲಭ್ಯಗಳು ಸಿಗುತ್ತಿಲ್ಲ. ಅವರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಈಗಾಗಲೇ ಸರ್ಕಾರ ಖಾಸಗಿ ವಾಣಿಜ್ಯ ಚಾಲಕರಿಗೆ ಅಂಬೇಡ್ಕರ್ ಸಹಾಯ ಹಸ್ತ ಯೋಜನೆ ಮತ್ತು ವಿಮಾ ಯೋಜನೆಗಳನ್ನು ಜಾರಿಗೆ ತಂದಿದೆ. ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ವಿಸ್ತರಿಸಬೇಕಾಗಿದೆ. ಹೀಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸೆಸ್ ಹೆಚ್ಚಿಸಿ, ಅದರಿಂದ ಸಂಗ್ರಹಿಸಲಾದ ಆದಾಯವನ್ನು ಕಾರ್ಮಿಕರ ಕಲ್ಯಾಣಕ್ಕೆ ಬಳಸಲು ಅನುವು ಮಾಡಿಕೊಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಪೆಟ್ರೋಲ್, ಡೀಸೆಲ್ ಮೇಲೆ ಕೇವಲ 1 ರೂ. ಸೆಸ್ ಹೆಚ್ಚಳ ಮಾಡಿದರೂ ಸಾವಿರಾರು ಕೋಟಿ ರೂ. ಸಂಗ್ರಹವಾಗುತ್ತದೆ. ಇದರಿಂದ ತೈಲ ಬಳಸುವವರಿಗೆ ಹೊರೆ ಏನೂ ಆಗುವುದಿಲ್ಲ. ಹೀಗೆ ಬಂದ ಆದಾಯದಿಂದ ಕಾರ್ಮಿಕರ ಎಲ್ಲ ಬೇಡಿಕೆ ಈಡೇರಿಸಬಹುದು. ಸದ್ಯ ಕಾರ್ಮಿಕರ ಮಕ್ಕಳಿಗಾಗಿ ಮೂರು ವಸತಿ ಶಾಲೆಗಳನ್ನು ಸರ್ಕಾರ ಮಂಜೂರು ಮಾಡಿದೆ. ಇವುಗಳ ಪ್ರಗತಿ ಗಮನಿಸಿ ಮತ್ತಷ್ಟು ಶಾಲೆಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.