ಬೆಂಗಳೂರು: ಮೊದಲ ಬಾರಿ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(RCB)ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದು, ಈ ಕುರಿತು ರಾಜ್ಯ ಸರ್ಕಾರ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ.
ಕಾಲ್ತುಳಿತದ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಯ ನೇತೃತ್ವ ವಹಿಸಿಕೊಂಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಅವರು ಗುರುವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ), ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಮತ್ತು ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವುದಾಗಿ ತಿಳಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಕಾಲ್ತುಳಿತ ಸಂಭವಿಸಿದ ಸ್ಥಳವನ್ನು ಜಿಲ್ಲಾಧಿಕಾರಿ ಜಗದೀಶ ಪರಿಶೀಲಿಸಿದರು.
"ಇಂದು ನಾನು ಕೆಎಸ್‌ಸಿಎ(ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ) ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದೇನೆ. ಇಲ್ಲಿನ ಎಲ್ಲಾ ಘಟನೆಗಳನ್ನು ನಾನು ನೋಡಿದ್ದೇನೆ. ವಿಚಾರಣೆಗಾಗಿ ಕೆಲವು ಜನರಿಗೆ ನೋಟಿಸ್ ನೀಡುತ್ತೇನೆ. ನಾನು ವಿಚಾರಣೆ ನಡೆಸಿ 15 ದಿನಗಳಲ್ಲಿ ಸರ್ಕಾರಕ್ಕೆ ವರದಿ ನೀಡುತ್ತೇನೆ. ಕೆಎಸ್‌ಸಿಎ, ಆರ್‌ಸಿಬಿ ನಿರ್ವಹಣೆ, ಈವೆಂಟ್ ಮ್ಯಾನೇಜರ್ ಮತ್ತು ಪೊಲೀಸ್ ಆಯುಕ್ತರಿಗೆ ನೋಟಿಸ್ ನೀಡುತ್ತೇನೆ. ಜನರು ತಮ್ಮ ಸಾಕ್ಷ್ಯಗಳನ್ನು ನೀಡುವಂತೆ ನಾನು ಕೇಳುತ್ತೇನೆ" ಎಂದು ಜಗದೀಶ ಅವರು ಸುದ್ದಿಗಾರರಿಗೆ ತಿಳಿಸಿದರು.
ಬುಧವಾರ ನಡೆದ ಈ ಕಾರ್ಯಕ್ರಮಕ್ಕೆ ಯಾರಿಂದ ಅನುಮತಿ ಪಡೆಯಲಾಗಿದೆ? ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ, ತಾವು ಅನುಮತಿ ನೀಡುವ ಅಧಿಕಾರ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ ಪೊಲೀಸ್ ಆಯುಕ್ತರಿಂದ ಅನುಮತಿ ಪಡೆಯಬೇಕಾಗಿದೆ ಎಂದು ಹೇಳಿದರು.
"ನಾನು ಈಗ ತನಿಖೆಯನ್ನು ಪ್ರಾರಂಭಿಸುತ್ತಿದ್ದೇನೆ. ಅದನ್ನು ಈಗಲೇ ಮುಗಿಸುವುದಿಲ್ಲ. ವಿಚಾರಣೆ ನಡೆಸಿ ಸರ್ಕಾರಕ್ಕೆ ವರದಿ ನೀಡುತ್ತೇನೆ" ಎಂದು ಅವರು ಹೇಳಿದರು.