ಸಿಎಂ ಸಿದ್ದರಾಮಯ್ಯ 
ರಾಜ್ಯ

ಬೆಂಗಳೂರು ಕಾಲ್ತುಳಿತ ಪ್ರಕರಣ: ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆಯಿಲ್ಲ; ಕ್ರಿಕೆಟ್ ಸ್ಟೇಡಿಯಂ ಬೇರೆಡೆಗೆ ಸ್ಥಳಾಂತರ?

ಸರ್ಕಾರ ಯಾವುದೇ ತಪ್ಪು ಹೆಜ್ಜೆ ಇಟ್ಟಿಲ್ಲ. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ತೆಗೆದುಕೊಂಡಿರುವ ಕಾರಣ, ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆಯಿಲ್ಲ.

ಬೆಂಗಳೂರು: ಆರ್ ಸಿ ಬಿ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ತಪ್ಪು ಹೆಜ್ಜೆ ಇಟ್ಟಿಲ್ಲ. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ತೆಗೆದುಕೊಂಡಿರುವ ಕಾರಣ, ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆಯಿಲ್ಲ. ಉತ್ತರಪ್ರದೇಶದ ಕುಂಭಮೇಳದ ಸೇತುವೆ ಬಿದ್ದು ಜನರು ಮೃತ್ತಪಟ್ಟ ಸಂದರ್ಭದಲ್ಲಿ ಅಲ್ಲಿನ ಮುಖ್ಯಮಂತ್ರಿಗಳು ರಾಜೀನಾಮೆ ನೀಡಿದರೇ? ಬಿಜೆಪಿ ಹಾಗೂ ಜೆಡಿಎಸ್ ನವರು ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಎಂದು ಪ್ರಶ್ನಿಸಿದರು.

ನ್ಯಾಯಾಂಗ ತನಿಖೆಗೆ ಆದೇಶ: ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿವೆ. ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕಂಡುಬರುವ ಮಾಹಿತಿ ಆಧರಿಸಿ ಸಂಬಂಧಪಟ್ಟ ಪೊಲೀಸರ ಮೇಲೆ ಸರ್ಕಾರ ಕ್ರಮ ತೆಗೆದುಕೊಂಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರ ಬೇಡಿಕೆಯಂತೆ ನ್ಯಾಯಾಂಗ ತನಿಖೆಗೆ ಆದೇಶ ಮಾಡಲಾಗಿದೆ. ಅಂತೆಯೇ ಪೊಲೀಸರ ಮೇಲೆಯೂ ಕ್ರಮ ಕೈಗೊಳ್ಳಲಾಗಿದೆ ಎಂದರು.

ವಿಧಾನಸೌಧದ ಕಾರ್ಯಕ್ರಮಕ್ಕೆ ಅನುಮತಿ: ವಿಧಾನಸೌಧದ ಭದ್ರತೆಯ ದೃಷ್ಟಿಯಿಂದ ಡಿಪಿಎಆರ್ ನಿಂದ ಷರತ್ತುಬದ್ಧ ಅನುಮತಿ ನೀಡಲಾಗಿತ್ತು. ಷರತ್ತುಗಳನ್ನು ಪಾಲಿಸಿ , ಕಾರ್ಯಕ್ರಮವನ್ನು ಆಯೋಜಿಸುವುದು ಪೊಲೀಸರ ಕರ್ತವ್ಯವಾಗಿತ್ತು. ಈ ಅನುಮತಿ ವಿಧಾನಸೌಧದ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದು, ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಘಟನೆ ಸಂಭವಿಸಿದೆ. ಪೊಲೀಸರು ಸಮರ್ಪಕವಾಗಿ ಇಲ್ಲಿ ಭದ್ರತೆ ಒದಗಿಸಬೇಕಿತ್ತು. ಆದರೆ ಪೊಲೀಸ್ ವ್ಯವಸ್ಥೆ ಸಮರ್ಪಕವಾಗಿರದಿದ್ದ ಕಾರಣ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡರು.

ಕಾರ್ಯಕ್ರಮದ ಸ್ಥಳದಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆ ಬಗ್ಗೆ ಪೊಲೀಸ್ ಇಲಾಖೆಯಿಂದ ಸಮಗ್ರ ಮಾಹಿತಿ ಕೊಟ್ಟಿರಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮವಾಗಿರಲಿಲ್ಲ ಹಾಗೂ ಅದಕ್ಕೆ ನನಗೆ ಆಹ್ವಾನವೂ ಇರಲಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ನವರು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ. ಮಧ್ಯಾಹ್ನ 3.50 ಕ್ಕೆ ಗಾಯಗೊಂಡವರು ಆಸ್ಪತ್ರೆಯಲ್ಲಿ ದಾಖಲಾಗಿದ್ದರೂ, ನನಗೆ ಸಂಜೆ 5.45 ಕ್ಕೆ ಕ್ರೀಡಾಂಗಣದ ಬಳಿ ಕಾಲ್ತುಳಿತ ಉಂಟಾಗಿ, ಜನರು ಮೃತಪಟ್ಟಿರುವ ಮಾಹಿತಿ ದೊರೆಯಿತು. ಕಾಲ್ತುಳಿತದ ಘಟನೆ ಘಟಿಸಬಾರದಿತ್ತು. ಬಹಳ ಬೇಸರ ತಂದಿದೆ ಎಂದರು.

ಕ್ರಿಕೆಟ್ ಕ್ರೀಡಾಂಗಣ ಬೇರೆಡೆಗೆ ಸ್ಥಳಾಂತರ: ಕ್ರಿಕೆಟ್ ಕ್ರೀಡಾಂಗಣವನ್ನು ಬೇರೆಡೆಗೆ ಸ್ಥಳಾಂತರಿಸುವ ಬಗ್ಗೆ ಸರ್ಕಾರ ಪರಿಶೀಲಿಸಲಿದೆ. ಯಾವ ಸರ್ಕಾರದ ಅವಧಿಯಲ್ಲಿಯೂ ಇಂತಹ ಅಹಿತಕರ ಘಟನೆ ನಡೆಯಬಾರದು. ವೈಯಕ್ತಿಕವಾಗಿ ಈ ಘಟನೆ ನನಗೆ ಮತ್ತು ಸರ್ಕಾರಕ್ಕೆ ನೋವು ತಂದಿದೆ.

ಸರ್ಕಾರ ತಪ್ಪು ಮಾಡಿಲ್ಲವಾದರೂ ಘಟನೆ ದು:ಖ ತಂದಿದೆ: ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ಐದು ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ. ಗುಪ್ತಚರ ಮುಖ್ಯಸ್ಥರನ್ನು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳನ್ನು ಬದಲಾಯಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರ ತಪ್ಪು ಮಾಡಿಲ್ಲವಾದರೂ ಘಟನೆ ದು:ಖ ತಂದಿದೆ ಎಂದು ಹೇಳಿದರು.

ಬಿಜೆಪಿಯ ಇಬ್ಬದಿತನದ ನಿಲುವು: ಹಲವಾರು ವರ್ಷಗಳ ಕನಸನ್ನು ಆರ್ ಸಿ ಬಿ ಕನಸು ನನಸಾಗಿಸಿದ್ದು, ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಅನುಮತಿ ನೀಡದಿರುವುದು ಗೃಹ ಸಚಿವರ ಅಸಮರ್ಪಕತೆಯನ್ನು ತೋರಿಸುತ್ತದೆ ಎಂದು ರಾಜ್ಯ ಬಿಜೆಪಿಯವರು ಹೇಳಿ ಈಗ ಘಟನೆಯ ನಂತರ ಸರ್ಕಾರವನ್ನು ದೂರುತ್ತಿದ್ದಾರೆ. ಇದು ರಾಜ್ಯ ಬಿಜೆಪಿಯ ಇಬ್ಬದಿತನದ ನಿಲುವನ್ನು ತೋರಿಸುತ್ತದೆ ಎಂದು ಟೀಕಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

SCROLL FOR NEXT