ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ.
ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಆಂಧ್ರ ಸಾರಿಗೆ ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ ಅಪಘಾತ ನಡೆದಿದೆ.
ಅಪಘಾತದ ತೀವ್ರತೆಗೆ ಬಸ್ಸಿನಲ್ಲಿದ್ದ ಕೇಶವರೆಡ್ಡಿ (44ವ), ತುಳಸಿ (21ವ), ಪ್ರಣತಿ (4ವ) ಹಾಗೂ 1 ವರ್ಷದ ಮಗು ಸಾವಿಗೀಡಾಗಿದ್ದಾರೆ. 16 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಸ್ ಓವರ್ಟೇಕ್ ಮಾಡುವಾಗ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿ ಒವರ್ ಟೇಕ್ ಮಾಡಲು ಹೋಗಿ ದುರಂತ ಸಂಭವಿಸಿರುವುದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.