ಮಡಿಕೇರಿ: ವರುಣನ ಆರ್ಭಟಕ್ಕೆ ಕೊಡಗಿನ ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಳದಿಂದ ಹಾರಂಗಿ ಡ್ಯಾಂನಿಂದ ಸುಮಾರು 18,000 ಕ್ಯೂಸೆಕ್ ನೀರು ಕಾವೇರಿ ನದಿಗೆ ಹರಿಸಲಾಗುತ್ತಿದೆ.
ಬ್ರಹ್ಮಗಿರಿ ಬೆಟ್ಟ, ತಲಕಾವೇರಿ ವ್ಯಾಪ್ತಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಕಾವೇರಿ, ಕನ್ನಿಕೆ ಸುಜ್ಯೋತಿ ನದಿಗಳು ನದಿಗಳು ತುಂಬಿ ಹರಿಯುತ್ತಿವೆ. ಇನ್ನು, ತ್ರಿವೇಣಿ ಸಂಗಮದಲ್ಲಿ ಹೊಸದಾಗಿ ನಿರ್ಮಾಣ ಮಾಡಿರುವ ಉದ್ಯಾನವನ ಸಂಪೂರ್ಣ ಮುಳುಗಡೆ ಆಗಿದೆ.
ಕಳೆದ 3-4 ದಿನಗಳಿಂದ ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಾವೇರಿ ಉಗಮಸ್ಥಾನ ತಲಕಾವೇರಿ ಭಾಗಮಂಡದಲ್ಲಿ ಮಳೆಯಾಗುತ್ತಿವೆ. ತ್ರಿವೇಣಿ ಸಂಗಮದಲ್ಲಿ ನೀರು ಉಕ್ಕಿ ಹರಿಯುತ್ತಿದೆ. ತ್ರಿವೇಣಿ ಸಂಗಮದ ಉದ್ಯಾನ ಸಂಪೂರ್ಣವಾಗಿ ಮುಳುಗಡೆಯಾಗಿದೆ.
ಭಂಗಡೇಶ್ಚರ ದೇವಾಲಯ ಆವರಣಕ್ಕೂ ನೀರು ಪ್ರವೇಶ ಮಾಡಿದೆ. ಭಂಗಡೇಶ್ವರ ದೇವಾಲಯ ಆವರಣದ ಅಂಗಡಿ ಮುಂಗಟ್ಟುಗಳಿಗೆ ತೆರವು ಮಾಡುವಂತೆ ಸೂಚನೆ ನೀಡಿದ್ದಾರೆ. ಈಗಾಗಲೇ ನಾಪೋಕ್ಲು- ಅಯ್ಯಂಗೇರಿ -ಸಣ್ಣಪುಲಿಕೊಟ್ಟು ರಸ್ತೆ ಮೇಲೆ ಸುಮಾರು 4 ಅಡಿಯಷ್ಟು ನೀರು ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಬಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ಜಲಾಶಯದ ಭದ್ರತೆ ದೃಷ್ಟಿಯಿಂದ ಈಗಾಗಲೇ 4 ಕ್ರಸ್ಟ್‌ಗೇಟ್‌ಗಳ ಮೂಲಕ 18 ಸಾವಿರ ಕ್ಯೂಸೆಕ್ ನೀರು ಕಾವೇರಿ ನದಿಗೆ ಬಿಡಲಾಗುತ್ತಿದೆ. ನದಿಪಾತ್ರದ ಜನರು ಮುನ್ನೆಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಕೊಡಗಿನಲ್ಲಿ ನದಿಗಳೆಲ್ಲವೂ ತುಂಬಿ ಹರಿಯುತ್ತಿವೆ. ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ಗ್ರಾಮದ ಹೊಳೆಕೆರೆ ರಸ್ತೆಗೆ ಕಾವೇರಿ ನದಿ ನೀರು ನುಗ್ಗಿ ಸಂಚಾರ ಸ್ಥಗಿತಗೊಂಡಿದೆ. ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಜನ ಕಂಗಾಲಾಗಿದ್ದಾರೆ. ಸ್ಥಳಕ್ಕೆ ಕಂದಾಯ ಪರಿವೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಲಕಾವೇರಿ ಹಾಗೂ ಭಾಗಮಂಡಲ ಭಾಗದಲ್ಲಿ ಭಾರೀ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದಾಖಲೆಯ 8 ಇಂಚು ಮಳೆಯಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ.