ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮೀಣ್ಯಂ ವನ್ಯಧಾಮದ ಮೀಸಲು ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಹುಲಿ ಮರಿಗಳ "ಅಸಹಜವಾಗಿ ಸಾವನ್ನಪ್ಪಿದ" ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಗುರುವಾರ ತನಿಖೆಗೆ ಆದೇಶಿಸಿದ್ದಾರೆ.
ಇಂದು ಬೆಳಗ್ಗೆ 9 ವರ್ಷದ ಹೆಣ್ಣು ಹುಲಿ ಹಾಗೂ ಅದರ ನಾಲ್ಕು ತಿಂಗಳ ನಾಲ್ಕು ಮರಿಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ ಖಂಡ್ರೆ, ಈ ಕುರಿತು ತನಿಖೆಗೆ ಆದೇಶಿಸಿದ್ದು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಪಿಸಿಸಿಎಫ್) ನೇತೃತ್ವದ ತಂಡ ತನಿಖೆ ನಡೆಸಲಿದೆ ಎಂದು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಹುಲಿಗಳು ವಿಷ ಸೇವಿಸಿ ಸಾವನ್ನಪ್ಪಿವೆ. ಆದರೆ ಸಾವಿಗೆ ನಿಖರವಾದ ಕಾರಣ ಕಂಡುಹಿಡಿಯಲು ವಿವರವಾದ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಅರಣ್ಯ ಇಲಾಖೆಯ ಪ್ರಕಾರ, ಐದು ಹುಲಿಗಳ ಸಾವನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದ್ದು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ವಹಿಸುವಂತೆ ಮತ್ತು ಮೂರು ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸಚಿವರು ಸೂಚಿಸಿದ್ದಾರೆ.
ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನಿ ಇಂದಿರಾಗಾಂಧೀ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದ್ದು, 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ಸಚಿವರು ತಿಳಿಸಿದ್ದಾರೆ.