ಬೆಂಗಳೂರು: ಪಿಇಎಸ್ ವಿಶ್ವವಿದ್ಯಾಲಯದ ಸಂಸ್ಥಾಪನಾ ಅಧ್ಯಕ್ಷ ಹಾಗೂ ಕುಲಾಧಿಪತಿ ಎಂ.ಆರ್. ದೊರೆಸ್ವಾಮಿ (89) ಅವರು ಗುರುವಾರ ನಿಧನರಾಗಿದ್ದಾರೆ.
ಅವರು ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದರು. ಪತ್ನಿ ಓರ್ವ ಪತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಬನಶಂಕರಿ ಎರಡನೇ ಹಂತದಲ್ಲಿರುವ ಅವರ ನಿವಾಸದಲ್ಲಿ ಗುರುವಾರ ಸಂಜೆ ಮೃತಪಟ್ಟಿದ್ದಾರೆ. ಅವರ ನಿವಾಸದಲ್ಲಿ ಶುಕ್ರವಾರ ಮಧ್ಯಾಹ್ನ 3.30ರವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30ಕ್ಕೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
ಮೂಲತಃ ಆಂಧ್ರಪ್ರದೇಶದ ಚಿತ್ತೂರಿನ ಕೃಷಿ ಕುಟುಂಬದಲ್ಲಿ 1937ರಲ್ಲಿ ಮೇದರಪಟ್ಲ ರಾಮನಾಯ್ಡು ದೊರೆಸ್ವಾಮಿ ಜನಿಸಿದ್ದರು. ಕರ್ನಾಟಕದಲ್ಲಿ ಉನ್ನತ ಶಿಕ್ಷಣ ಪಡೆದು, ಇಲ್ಲಿಯೇ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಆರಂಭಿಸಿದ್ದರು. ನಂತರ ಖಾಸಗಿ ಕಾಲೇಜು ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸಿ, ಅಲ್ಲಿಂದ ಹೊರಬಂದು ಪಿಇಎಸ್ ಶಿಕ್ಷಣ ಸಂಸ್ಥೆ ಆರಂಭಿಸಿದರು.
ದಯಾನಂದ ಸಂಜೆ ಕಾಲೇಜು, ಹನುಮಂತನಗರದ ಪಿಇಎಸ್ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ ಅವರು, 2013ರಿಂದ ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ದೂರದೃಷ್ಟಿ ಹೊಂದಿದ್ದ ಅವರು, 1972ರಲ್ಲಿ ಪಿಇಎಸ್ ಪದವಿಪೂರ್ವ ಕಾಲೇಜು ಪ್ರಾರಂಭಿಸಿದ್ದರು. ಬಳಿಕ ಪದವಿ ಕಾಲೇಜು, ವಿಶ್ವವಿದ್ಯಾಲಯ ಪ್ರಾರಂಭಿಸಿದರು. 40 ವಿದ್ಯಾರ್ಥಿಗಳೊಂದಿಗೆ ಪ್ರಾರಂಭಿಸಿದ ಸಂಸ್ಥೆಯು, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಶಾಖೆಗಳನ್ನು ಹೊಂದಿದೆ. ಸುಮಾರು 18 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ದೊರೆಸ್ವಾಮಿ ಅವರು ಬಿಜೆಪಿಯಿಂದ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು. ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗೆ ರಾಜ್ಯ ಸರ್ಕಾರದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿ ವಿವಿಧ ಪ್ರಶಸ್ತಿಗಳಿಂದ ಗೌರವಿಸಲ್ಪಟ್ಟಿದ್ದಾರೆ.