ಸಿದ್ದರಾಮಯ್ಯ ಬಜೆಟ್ ಮಂಡನೆ online desk
ರಾಜ್ಯ

ರಾಜ್ಯ ಬಜೆಟ್: ಜಲಸಂಪನ್ಮೂಲ, ನೀರಾವರಿಗೆ ಸಿಕ್ಕಿದ್ದು...; ಮೇಕೆದಾಟು ಯೋಜನೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ನೀರಾವರಿ ಯೋಜನೆಗಳಡಿ ನೀರಿನ ಬಳಕೆಯಲ್ಲಿ ದಕ್ಷತೆ ಹೆಚ್ಚಿಸಲು ಹಾಗೂ ನೀರು ನಿರ್ವಹಣೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕರ್ನಾಟಕ ನೀರಾವರಿ (ತಿದ್ದುಪಡಿ) ವಿಧೇಯಕ 2024ನ್ನು ತಿದ್ದುಪಡಿ ಮಾಡಿ ಜಾರಿಗೊಳಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ದಾಖಲೆಯ 16 ನೇ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ನೀರಾವರಿ, ಜಲಸಂಪನ್ಮೂಲ ಇಲಾಖೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ.

ನೀರಿನ ಪ್ರಾಮುಖ್ಯತೆಯನ್ನು ವಿವರಿಸುವುದಕ್ಕಾಗಿ ಸಿಎಂ ಸಿದ್ದರಾಮಯ್ಯ

ಹಾ! ಗಂಟಲು ಒಣಗಿದೆ!!

ತಕೋ ಈ ಬಂಗಾರದ ಸರಪಳಿ

ಬದಲಾಗಿ ಒಂದು ಗುಟುಕು ನೀರು ಕೊಡು

ಎಂಬ ವಿಲ್ಸನ್‌ ಕಟೀಲ್ ಅವರ ಕವಿತೆಯನ್ನು ಉಲ್ಲೇಖಿಸಿದ್ದಾರೆ. ನೀರಾವರಿ ಯೋಜನೆಗಳಡಿ ನೀರಿನ ಬಳಕೆಯಲ್ಲಿ ದಕ್ಷತೆ ಹೆಚ್ಚಿಸಲು ಹಾಗೂ ನೀರು ನಿರ್ವಹಣೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕರ್ನಾಟಕ ನೀರಾವರಿ (ತಿದ್ದುಪಡಿ) ವಿಧೇಯಕ 2024ನ್ನು ತಿದ್ದುಪಡಿ ಮಾಡಿ ಜಾರಿಗೊಳಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಎತ್ತಿನಹೊಳೆ

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ನೀರನ್ನು ಮೇಲೆತ್ತಿ ಗುರುತ್ವಾ ಕಾಲುವೆಯ ಸರಪಳಿ: 32.5 ಕಿ.ಮೀ ವರೆಗೆ ಹರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಎಲ್ಲಾ ಎಂಟು ವಿಯರ್‌ಗಳಲ್ಲಿ ಲಭ್ಯವಾಗುವ ನೀರನ್ನು ಗುರುತ್ವಾ ಕಾಲುವೆಯ ಸರಪಳಿ: 241 ಕಿ.ಮೀ ವರೆಗೆ ಹರಿಸಲಾಗುವುದು. ಈ ಯೋಜನೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಭದ್ರಾ ಮೇಲ್ದಂಡೆ

ಭದ್ರಾ ಮೇಲ್ದಂಡೆ ಯೋಜನೆಗೆ 2023-24ರ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಘೋಷಿಸಿದ 5,300 ಕೋಟಿ ರೂ. ಅನುದಾನ ಇನ್ನೂ ಬಿಡುಗಡೆಯಾಗಿರುವುದಿಲ್ಲ. ಆದರೂ, ರಾಜ್ಯ ಸರ್ಕಾರ ಅಗತ್ಯ ಅನುದಾನವನ್ನು ಒದಗಿಸಿ ಈ ಯೋಜನೆಯನ್ನು ಪೂರ್ಣಗೊಳಿಸಲು ಕ್ರಮವಹಿಸುತ್ತಿದೆ ಎಂದು ಇದೇ ವೇಳೆ ತಿಳಿಸಿದರು.

ಏತ ನೀರಾವರಿ ಯೋಜನೆ

ತರೀಕೆರೆ ಏತ ನೀರಾವರಿ ಯೋಜನೆಯಡಿ 79 ಕೆರೆಗಳನ್ನು ತುಂಬಿಸುವ ಮೂಲಕ 49,790 ಎಕರೆ ಸೂಕ್ಷ್ಮ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 2,611 ಕೋಟಿ ರೂ. ಅಂದಾಜು ಮೊತ್ತದ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ಹೊಸದುರ್ಗ, ಹೊಳಲ್ಕೆರೆ, ಜಗಳೂರು, ಮೊಳಕಾಲ್ಮೂರು, ಚಳ್ಳಕೆರೆ ಮತ್ತು ಪಾವಗಡ ತಾಲ್ಲೂಕುಗಳಲ್ಲಿನ 30 ಕೆರೆಗಳನ್ನು ತುಂಬಿಸಿ ಒಂದು ಲಕ್ಷದ ಎಪ್ಪತ್ತೇಳು ಸಾವಿರ ಎಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸಾಮರ್ಥ್ಯವನ್ನು ಕಲ್ಪಿಸಲಾಗುವುದು ಎಂದು ಸಿಎಂ ಬಜೆಟ್ ನಲ್ಲಿ ಭರವಸೆ ನೀಡಿದ್ದಾರೆ.

ಕೃಷ್ಣ ಮೇಲ್ದಂಡೆ ಯೋಜನೆ

ಕೃಷ್ಣ ಮೇಲ್ದಂಡೆ ಯೋಜನೆ ಹಂತ-3ರ ವ್ಯಾಪ್ತಿಯ ಆಲಮಟ್ಟಿ ಅಣೆಕಟ್ಟಿನ ಗೇಟನ್ನು 524.256 ಮೀಟರ್‌ವರೆಗೆ ಎತ್ತರಿಸುವುದರಿಂದ ಮುಳುಗಡೆಯಾಗುವ ಜಮೀನುಗಳನ್ನು ಒಪ್ಪಂದ ಐತೀರ್ಪಿನ (Consent Award) ಮುಖಾಂತರ ಒಂದೇ ಹಂತದಲ್ಲಿ ಭೂಸ್ವಾಧೀನಪಡಿಸಿಕೊಂಡು ರೈತರಿಗೆ ಪರಿಹಾರ ವಿತರಣೆಗೆ ಕ್ರಮವಹಿಸಲಾಗುವುದು. ಅಲ್ಲದೇ, 2.01 ಲಕ್ಷ ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಬಾಕಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಕ್ರಮವಹಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ

ಪೂರ್ವ ಸಿದ್ಧತಾ ಕಾರ್ಯ ಅಂತಿಮಗೊಂಡಿದ್ದು, ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರಗಳ ತೀರುವಳಿ ದೊರೆತ ಕೂಡಲೇ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಿಎಂ ಇದೇ ವೇಳೆ ಘೋಷಿಸಿದ್ದಾರೆ.

ಕಳಸಾ-ಬಂಡೂರಾ ನಾಲಾ ತಿರುವು ಯೋಜನೆಯಡಿ 3.9 ಟಿಎಂಸಿ ನೀರಿನ ಬಳಕೆಗಾಗಿ ಕೇಂದ್ರ ಸರ್ಕಾರದಿಂದ ತೀರುವಳಿಗಳನ್ನು ನಿರೀಕ್ಷಿಸಿ ಈಗಾಗಲೇ ಯೋಜನಾ ಕಾಮಗಾರಿಗಳನ್ನು ಕೆಲವು ಷರತ್ತುಗಳೊಂದಿಗೆ ಗುತ್ತಿಗೆ ವಹಿಸಲಾಗಿದೆ. ಕೇಂದ್ರ ಸರ್ಕಾರದ ಅನುಮೋದನೆ ದೊರೆತ ಕೂಡಲೇ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು.

ಜಲಸಂಪನ್ಮೂಲ ಇಲಾಖೆಯಲ್ಲಿ ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲಿ ಏಕರೂಪದ ತಾಂತ್ರಿಕ ಮಾನದಂಡಗಳನ್ನು ಜಾರಿಗೊಳಿಸಲಾಗುವುದು.

ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ ಹೂಳಿನಿಂದಾಗಿ ನೀರಿನ ಸಂಗ್ರಹಣೆಯಲ್ಲಿ ಆಗಿರುವ ಕೊರತೆಯನ್ನು ಸರಿದೂಗಿಸಲು ಕೊಪ್ಪಳ ಜಿಲ್ಲೆಯಲ್ಲಿ ನವಲಿ ಸಮತೋಲನಾ ಜಲಾಶಯ ನಿರ್ಮಾಣವೂ ಸೇರಿದಂತೆ ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಅಣೆಕಟ್ಟು ಗೇಟುಗಳ ಸದೃಢತೆಯನ್ನು ತಾಂತ್ರಿಕ ಪರಿಶೀಲನೆಗೊಳಪಡಿಸಿ ಅಗತ್ಯ ಕಂಡುಬಂದಲ್ಲಿ ಗೇಟುಗಳನ್ನು ದುರಸ್ತಿಗೊಳಿಸಲು ಮತ್ತು ಬದಲಿಸಲು ಆದ್ಯತೆಯ ಮೇಲೆ ಕ್ರಮವಹಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಸಣ್ಣ ನೀರಾವರಿ

ಎತ್ತಿನಹೊಳೆಯ ಯೋಜನೆಯಿಂದ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ 45 ಕೆರೆಗಳನ್ನು ಹಾಗೂ ಕೊರಟಗೆರೆ ತಾಲ್ಲೂಕಿನ 62 ಕೆರೆಗಳನ್ನು ತುಂಬಿಸಿ ಅಂತರ್ಜಲ ಹೆಚ್ಚಿಸುವ ಯೋಜನೆಯನ್ನು 553 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಲು ಕ್ರಮವಹಿಸಲಾಗುವುದು ಎಂದು ಸಿಎಂ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

ಯಾವ ಯೋಜನೆಗೆ ಎಷ್ಟು ಅನುದಾನ?

  • ವೃಷಭಾವತಿ ವ್ಯಾಲಿ ಮೊದಲನೇ ಹಂತದ 70 ಕೆರೆ ತುಂಬಿಸುವ ಯೋಜನೆಗೆ 1,080 ಕೋಟಿ ರೂ

  • 70 ಕೋಟಿ ರೂ. ಮೊತ್ತದ ಹೆಚ್‌.ಎನ್ ವ್ಯಾಲಿ 2ನೇ ಹಂತದ ಯೋಜನೆಯಡಿ 24 ಕೆರೆ ತುಂಬಿಸುವ ಯೋಜನೆ ಪೂರ್ಣಗೊಳಿಸುವ ಗುರಿ

  • 93.50 ಕೋಟಿ ರೂ. ಮೊತ್ತದ ಬೆಂಗಳೂರು ಪೂರ್ವ ತಾಲ್ಲೂಕಿನ 18 ಕೆರೆ ತುಂಬಿಸುವ ಯೋಜನೆ ಹಾಗೂ ಇತರೆ ಯೋಜನೆಗಳನ್ನು ಪೂರ್ಣಗೊಳಿಸುವ ಗುರಿ

ಪ್ರಸಕ್ತ ಸಾಲಿನಲ್ಲಿ ರಾಜ್ಯಾದ್ಯಂತ ಸಣ್ಣ ನೀರಾವರಿ ಯೋಜನೆಗಳಾದ ಕೆರೆಗಳ ಆಧುನೀಕರಣ, ಅಣೆಕಟ್ಟು ಮತ್ತು ಪಿಕಪ್‌, ಕಿಂಡಿ ಅಣೆಕಟ್ಟು, ಏತ ನೀರಾವರಿ, ನಿಷ್ಕ್ರಿಯ ಯೋಜನೆಗಳ ಪುನರುಜ್ಜೀವನ ಇತ್ಯಾದಿ ಯೋಜನೆಗಳಡಿ ಒಟ್ಟಾರೆ 2,000 ಕೋಟಿ ರೂ. ಮೊತ್ತದ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT