ಚಿಕ್ಕಬಳ್ಳಾಪುರ: ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಕಾರು ಹೊತ್ತಿ ಉರಿದು ಇಬ್ಬರು ಸಜೀವ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ನಡೆದಿದೆ. ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಓರ್ವ ಪುರುಷ ಸಜೀವದಹನವಾಗಿದ್ದು, ಆಂಧ್ರ ಪ್ರದೇಶ ಮೂಲದ ಧನಂಜಯ ರೆಡ್ಡಿ(31ವ), ಕಲಾವತಿ(35ವ) ಮೃತರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನುಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಭೀಕರ ಅಪಘಾತದಲ್ಲಿ ಕಾರು ಬೆಂಕಿಯಿಂದ ಹೊತ್ತಿ ಉರಿದಿದ್ದರೆ, ಬಸ್ ಪಲ್ಟಿಯಾಗಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮದನಪಲ್ಲಿ ನಿವಾಸಿಗಳಾದ ಇಬ್ಬರು ಸುಟ್ಟು ಕರಕಲಾಗಿದ್ದರೆ, ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಖಾಸಗಿ ಬಸ್ನಲ್ಲಿ ಪ್ರಯಾಣಿಕರೆಲ್ಲರೂ ಬಚಾವಾಗಿದ್ದಾರೆ.
ಚಿತ್ರದುರ್ಗದಲ್ಲಿ ಭೀಕರ ಅಪಘಾತ, ಐವರು ಸಾವು
ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.