ಬೆಂಗಳೂರು: ರಾಜ್ಯಕ್ಕೆ ಭೇಟಿ ನೀಡುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಣಾಪುರದಲ್ಲಿ ಇಸ್ರೇಲಿ ಪ್ರಜೆ ಮತ್ತು ಹೋಂಸ್ಟೇ ಮಾಲೀಕರ ಮೇಲೆ ನಡೆದ ಭೀಕರ ಹಲ್ಲೆ ಮತ್ತು ಅತ್ಯಾಚಾರ ಪ್ರಕರಣ ಸಂಬಂಧ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದ್ದಾರೆ.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ. ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ ಎಂದು ಹೇಳಿದ್ದಾರೆ.
ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ. ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ,